ದ.ಕ. ಜಿಲ್ಲೆ: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ 54 ಮಂದಿ ವಿರುದ್ಧ ಪ್ರಕರಣ ದಾಖಲು
ಮಂಗಳೂರು, ಜೂ.26: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ 54 ಮಂದಿಯ ವಿರುದ್ಧ ದ.ಕ. ಜಿಲ್ಲೆಯಲ್ಲಿ ಗಂಭೀರ ಪ್ರಕರಣ ದಾಖಲಿಸಲಾಗಿದೆ.
ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಮನೆಯ ಹೊರಗಡೆ ಸಂಚರಿಸುತ್ತಿರುವುದು ರುಜುವಾದ ಹಿನ್ನೆಲೆಯಲ್ಲಿ ಇವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಈ ಪೈಕಿ 10 ಪ್ರಕರಣಗಳು ಪುತ್ತೂರು ತಾಲೂಕು ಹಾಗೂ ಉಳಿದ ಪ್ರಕರಣಗಳು ಮಂಗಳೂರು ತಾಲೂಕಿಗೆ ಸಂಬಂಧಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕ್ವಾರಂಟೈನ್ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದ್ದು, ಪ್ರತಿಯೊಬ್ಬರ ಮೇಲೂ ನಿಗಾ ಇಡಲಾಗಿದೆ. ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸಿಬ್ಬಂದಿಯಲ್ಲದೆ, ಇತರ ಇಲಾಖೆ ಅಧಿಕಾರಿ, ಸಿಬ್ಬಂದಿಯೊಂದಿಗೆ ಅಕ್ಕಪಕ್ಕದ ಮನೆಯವರಲ್ಲೂ ಕ್ವಾರೆಂಟೈನ್ ಇರುವವರ ಮೇಲೆ ನಿಗಾ ಇಡಲು ತಿಳಿಸಲಾಗುತ್ತಿದೆ.
ದ.ಕ. ಜಿಲ್ಲೆ ಕ್ವಾರೆಂಟೈನ್ ನಿಗಾ ಕಾರ್ಯದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಕ್ವಾರಂಟೈನ್ ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕೇಸು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.