ಕೊರೋನ ನಿರ್ವಹಣೆ: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ನೋಡಲ್ ಅಧಿಕಾರಿ ನೇಮಕ- ಸಿಎಂ ಯಡಿಯೂರಪ್ಪ

Update: 2020-06-26 16:38 GMT

ಬೆಂಗಳೂರು, ಜೂ. 26: ಕೊರೋನ ಸೋಂಕು ನಿಯಂತ್ರಣ ಮತ್ತು ನಿರ್ವಹಣೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬ ನೋಡಲ್ ಅಧಿಕಾರಿ ನೇಮಕ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಸಂಬಂಧ ತನ್ನ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ನಗರದ ಸಚಿವರು ಹಾಗೂ ಸರ್ವಪಕ್ಷ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಕುರಿತು ಸೂಕ್ತ ಮೇಲ್ವಿಚಾರಣೆ ನಡೆಸಬೇಕು. ಜೊತೆಗೆ ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಪ್ರಕರಣಗಳು ಕಡಿಮೆ: ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನಿಸಿ ಸೋಂಕು ನಿಯಂತ್ರಣಕ್ಕೆ ಸರಕಾರ ಅಗತ್ಯ ಸಿದ್ದತೆ ಮಾಡಿಕೊಂಡಿದೆ. ದೇಶದ ಇತರ ಮಹಾನಗರಗಳಿಗೆ ಹೋಲಿಸಿದರೆ, ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ವರದಿಯಾಗಿವೆ ಎಂದು ಸ್ಪಷ್ಟನೆ ನೀಡಿದರು.

ಸೋಂಕು ನಿಯಂತ್ರಣಕ್ಕೆ ಎಲ್ಲ ಪಕ್ಷಗಳ ಶಾಸಕರು ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ನಿಮ್ಮೆಲ್ಲರ ಸಲಹೆ-ಸೂಚನೆಗಳನ್ನು ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಲಿದೆ. ಪ್ರತಿ ಕ್ಷೇತ್ರದಲ್ಲಿ ಸೋಂಕಿ ಶಂಕಿತರ ಗಂಟಲು ದ್ರವ ಪರೀಕ್ಷೆಗೆ ಹೆಚ್ಚಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದ ಅವರು, ಸೋಂಕಿನಿಂದ ಮೃತಪಟ್ಟವರ ಮೃತದೇಹ ಸಾಗಿಸಲು ಆಂಬ್ಯುಲೆನ್ಸ್ ವ್ಯವಸ್ತೆ ಹೆಚ್ಚಿಸಲು ಕ್ರಮ ವಹಿಸಲಾಗುವುದು ಎಂದರು.

ರೋಗ ಲಕ್ಷಣ ಇಲ್ಲದೆ ಇರುವವರನ್ನು ಕ್ವಾರಂಟೈನ್ ಮಾಡಲು ಬೆಂಗಳೂರು ನಗರದ ಹೊರ ವಲಯದಲ್ಲಿ ಬೃಹತ್ ಕಲ್ಯಾಣ ಮಂಟಪಗಳನ್ನು ಬಳಸಿಕೊಳ್ಳಲಾಗುವುದು. ಜೊತೆಗೆ ಈ ನಿಟ್ಟಿನಲ್ಲಿ ಹೊಟೇಲ್‍ಗಳನ್ನು ಗುರುತಿಸಲಾಗಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಔಷಧಿಗಳನ್ನು ಮುನ್ನಚ್ಚರಿಕೆ ಕ್ರಮವಾಗಿ ವಿತರಿಸಲು ಪರಿಶೀಲಿಸಲಾಗುವುದು ಎಂದರು.

ಕೊರೋನ ಸೋಂಕು ತಡೆಗಟ್ಟಲು ಶ್ರಮಿಸುತ್ತಿರುವ ವೈದೈರು, ನರ್ಸ್‍ಗಳು, ಪೋಲಿಸ್, ಪೌರ ಕಾರ್ಮಿಕರು ಸೇರಿದಿಂತೆ ಕೊರೋನ ವಾರಿಯರ್ಸ್ ರಕ್ಷಣೆಗೆ ಸರಕಾರ ಆದ್ಯತೆ ನೀಡಲಿದೆ. ಜೊತೆಗೆ ಸಾರ್ವಜನಿಕರು ಸರಕಾರದ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು. ಎಲ್ಲರೂ ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ನಿಯಂತ್ರಣಕ್ಕೆ ಸರಕಾರದೊಂದಿಗೆ ಸಹಕರಿಸಬೇಕು ಎಂದು ಕೋರಿದರು.

ಕೊರೋನ ಸೋಂಕು ನಿಯಂತ್ರಣ ದೃಷ್ಟಿಯಿಂದ ಚಿಕಿತ್ಸೆಗೆ ಈಗಾಗಲೇ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿರಿಸಲು ರಾಜ್ಯ ಸರಕಾರ ಸರಕಾರ ಆದೇಶ ಹೊರಡಿಸಿದೆ. ಕೋವಿಡ್-19 ನಿರ್ವಹಣೆಗೆ ಸರಕಾರಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಎಲ್ಲರೂ ಭರವಸೆ ನೀಡಿದ್ದಾರೆ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ

-ಆರ್.ಅಶೋಕ್, ಕಂದಾಯ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News