ಮನೆಗಳ್ಳತನ ಪ್ರಕರಣ: ಆರೋಪಿ ಬಂಧನ, 25 ಲಕ್ಷ ರೂ. ಮೌಲ್ಯದ ಮಾಲು ಜಪ್ತಿ

Update: 2020-06-27 11:56 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.27: ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿರುವ ಇಲ್ಲಿನ ಮಾಗಡಿ ಠಾಣಾ ಪೊಲೀಸರು, 25 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಉದಯ್‍ಕುಮಾರ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಚ್ ತಿಂಗಳಲ್ಲಿ ಮಾಗಡಿಯ ಹರ್ತಿ ಗ್ರಾಮದ ರೇಣುಕಮ್ಮ ಎಂಬುವರ ಮನೆಯ ಬೀಗ ಒಡೆದು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣಗಳನ್ನ ಕಳವು ಮಾಡಿ ಪರಾರಿಯಾಗಿದ್ದ. ಈ ಸಂಬಂದ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಬಂಧಿತ ಆರೋಪಿಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಮಾರು 18 ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ಹೊರ ಬಂದಿವೆ.

ಬಂಧಿತನಿಂದ 560 ಗ್ರಾಂ ಚಿನ್ನಾಭರಣಗಳು, 3 ಕೆ.ಜಿ ಬೆಳ್ಳಿ ಸಾಮಗ್ರಿಗಳು, ಕೃತ್ಯಕ್ಕೆ ಬಳಸುತ್ತಿದ್ದ ಒಂದು ಕಾರು, ಎರಡು ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News