ಸರಕಾರಗಳು ರೈತ ವಿರೋಧಿ ನೀತಿಗಳನ್ನು ಹಿಂಪಡೆಯಬೇಕು: ರೈತ ಸಂಘಟನೆಗಳಿಂದ ಪ್ರತಿಭಟನೆ

Update: 2020-06-27 18:00 GMT

ವಿಜಯಪುರ, ಜೂ.27: ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ವಿರುದ್ಧವಾಗಿರುವ ನೀತಿಗಳನ್ನು ಜಾರಿಗೆ ತರಲು ಹೊರಟಿರುವುದನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ಕಾರ್ಯಕರ್ತರು ಪ್ರತಿಭಟಿಸಿದರು.

ಬಿಜಾಪುರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಎಪಿಎಂಸಿ ಕಾಯ್ದೆ ತಿದ್ದುಪಡೆ, ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆಗಳು ರೈತ ವಿರೋಧಿಯಾಗಿವೆ. ಕಾಯ್ದೆಗಳು ತಿದ್ದುಪಡಿಯಾಗುವುರಿಂದ ರೈತರು ಸಂಕಷ್ಟಕ್ಕೆ ಸಿಲುಕುವಂತಾಗುತ್ತದೆ ಎಂದರು.

ಸರಕಾರ ರೈತರ ಭೂಮಿ ಖರೀದಿಗೆ ಮುಕ್ತ ಅವಕಾಶ ಕಲ್ಪಿಸಿದೆ. ರೈತರ ಭೂಮಿಗಳು ಕಾರ್ಪೋರೇಟ್ ಸಂಸ್ಥೆಗಳ ಪಾಲಾಗುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದರು. ಕೊರೋನ ವೈರಸ್ ಭೀತಿ ಸಮಯಲ್ಲಿ ರೈತರ ಪರ ನಿಲ್ಲಬೇಕಿದ್ದ ಸರಕಾರಗಳು ಇಂದು ಅವರ ಬಾಯಿಗೆ ಮಣ್ಣು ಹಾಕುವ ಕೆಲಸ ಮಾಡುತ್ತಿವೆ. ಅಲ್ಲದೆ ಎಪಿಎಂಸಿ ಕಾಯ್ದೆ ತಿದ್ದುಪಡೆಯಿಂದ ಅನೇಕ ಕೂಲಿ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವಂತಾಗಿದೆ ಎಂದು ಕಿಡಿಕಾರಿದರು.

ಜಾರಿಗೆ ತರಲು ಹೊರಟಿರುವ ಎಲ್ಲ ಕಾಯ್ದೆಗಳನ್ನು ತಿದ್ದುಪಡಿಯಿಂದ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News