ರಾಜ್ಯದಲ್ಲಿ ಜೂ.29 ರಿಂದ ಸಿಡಿಲು ಸಹಿತ ಧಾರಾಕಾರ ಮಳೆ ಸಾಧ್ಯತೆ

Update: 2020-06-28 13:56 GMT

ಬೆಂಗಳೂರು, ಜೂ.28: ರಾಜ್ಯದಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ನಾಳೆ(ಜೂ.29)ಯಿಂದ ಜು.1 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಜುಲೈ 1ರವರೆಗೆ ‘ಆರೆಂಜ್‍ ಅಲರ್ಟ್’ ಘೋಷಿಸಲಾಗಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಒಂದೇ ಅವಧಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಮುಂಗಾರು ಚುರುಕಾಗಿರುವುದರಿಂದ ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಈಗಾಗಲೇ ಏರಿಕೆಯಾಗುತ್ತಿದೆ. ಜಲಾನಯನ ಭಾಗದಲ್ಲಿ ಮಳೆ ಸುರಿಯುತ್ತಿರುವುದರಿಂದ ಜಲಾಶಯಗಳ ಒಳಹರಿವಿನ ಪ್ರಮಾಣ ನಿಧಾನವಾಗಿ ಏರಲಿದ್ದು, ಕೃಷಿ ಚಟುವಟಿಕೆಗಳಿಗೆ ಪೂರಕ ವಾತಾವರಣವಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News