ಖಾಸಗಿ ಆಸ್ಪತ್ರೆಗಳು ಕೊರೋನ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಿದರೆ ಕ್ರಮ: ರಾಜ್ಯ ಸರಕಾರ ಎಚ್ಚರಿಕೆ

Update: 2020-06-28 17:41 GMT

ಬೆಂಗಳೂರು, ಜೂ.28: ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಸರಕಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ಖಾಸಗಿ ಆಸ್ಪತ್ರೆಗಳು ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಬೇಕು ಎಂದು ಸರಕಾರ ಆದೇಶ ಹೊರಡಿಸಿದೆ. ಅದರಂತೆ ಆಸ್ಪತ್ರೆಗಳು ಕೋವಿಡ್-19 ರೋಗಿಗಳನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಬೇಕು. ಇಲ್ಲದಿದ್ದರೆ ಅವರ ವಿರುದ್ಧ 20 ಕಾಯ್ದೆಯಡಿ ಕ್ರಮ ಜರುಗಿಸುವುದಾಗಿ ಸರಕಾರ ಎಚ್ಚರಿಕೆ ನೀಡಿದೆ.

ಈ ಸಂಬಂಧ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಆದೇಶ ಹೊರಡಿಸಿದ್ದು ಕೆಲ ಖಾಸಗಿ ಆಸ್ಪತ್ರೆಗೆ ಕೋವಿಡ್-19 ರೋಗಿಗಳನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಲು ನಿರಾಕರಿಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ಇದು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಗೆ ವಿರುದ್ಧವಾಗಿದೆ ಎಂದು ಅವರು ಆದೇಶದಲ್ಲಿ ಹೇಳಿದ್ದಾರೆ.

ಈ ಕಾಯ್ದೆಯಡಿ ಸರಕಾರ ಸೂಚಿಸುವಂತೆ ಖಾಸಗಿ ಆಸ್ಪತ್ರೆಗಳು ರಾಜ್ಯ ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳು ಕೊರೋನ ಸೋಂಕಿತರನ್ನು ದಾಖಿಸಿಕೊಳ್ಳಲು ಅಥವಾ ಚಿಕಿತ್ಸೆ ನೀಡಲು ನಿರಾಕರಿಸಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿಪತ್ತು ನಿರ್ವಹಣಾಕಾಯ್ದೆ 2005 ನೀಡಿರುವ ಅಧಿಕಾರದಂತೆ ಖಾಸಗಿ ಆಸ್ಪತ್ರೆಗಳು ಕೋವಿಡ್-19 ಸೋಂಕಿತನನ್ನು ದಾಖಲಿಸಿ ಚಿಕಿತ್ಸೆ ನೀಡಲು ನಿರಾಕರಿಸಬಾರದು. ಕಡ್ಡಾಯವಾಗಿ ಖಾಸಗಿ ವೈದ್ಯಕೀಯ ಸಂಸ್ಥೆಯ ಕಾಯ್ದೆಯನ್ನು ಪಾಲಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News