ಹೆಜಮಾಡಿ ಎಸೆಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಜಗದೀಶ್ ಭೇಟಿ

Update: 2020-06-29 08:31 GMT

ಪಡುಬಿದ್ರೆ, ಜೂ.29: ಕೊರೋನ ಸೋಂಕಿತ ಎಸೆಸೆಲ್ಸಿ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದ ಹೆಜಮಾಡಿ ಪರೀಕ್ಷಾ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಜಮಾಡಿ ಪರೀಕ್ಷಾ ಕೇಂದ್ರದಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಮತ್ತು ಸುರಕ್ಷತಾ ಕ್ರಮ ಗಳನ್ನು ಕೈಗೊಳ್ಳಲಾಗಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯ ಇಲ್ಲ ಎಂದು ತಿಳಿಸಿದರು.

ಸೋಂಕಿತ ವಿದ್ಯಾರ್ಥಿನಿಯನ್ನು ಚಿಕಿತ್ಸೆಗಾಗಿ ಕಾರ್ಕಳ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯವಾಗಿರುವ ಆಕೆ, ಓದಿನಲ್ಲಿ ನಿರತಳಾಗಿದ್ದಾಳೆ. ಆಕೆಯ ಹೆತ್ತವರ ಸಂಪರ್ಕದಿಂದ ಆಕೆಗೆ ಸೋಂಕು ಹರಡಿದ್ದು, ಪರೀಕ್ಷಾ ಕೇಂದ್ರ ದಿಂದ ಸೋಂಕು ಪಸರಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಆಕೆ ಪರೀಕ್ಷೆ ಬರೆದಿದ್ದ ಕೊಠಡಿಯನ್ನು ಸ್ಯಾನಿಟೈಸ್ ಮಾಡಿ ಬಂದ್ ಮಾಡ ಲಾಗಿದೆ. ಈ ಕೊಠಡಿಯಲ್ಲಿ ಪರೀಕ್ಷೆ ಬರೆದ ಇತರ ವಿದ್ಯಾರ್ಥಿಗಳಿಗೆ ಬೇರೆ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತದೆ. ಸಾರ್ವಜನಿಕರು, ಪಾಲಕರು ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News