ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಜಾರಿ ಕೋರಿ ಪಿಐಎಲ್: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2020-06-29 17:02 GMT

ಬೆಂಗಳೂರು, ಜೂ.29: ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ಎಸ್ಸಿ, ಎಸ್ಟಿ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ-1989ರ ನಿಬಂಧನೆಗಳನ್ನು ಜಾರಿಗೆ ತರಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು. 1995ರ ನಿಯಮ ಕಾಯ್ದೆಯಡಿ ನೋಂದಾಯಿತ ಪ್ರಕರಣಗಳ ತನಿಖೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲು ನಿರ್ದೇಶನ ನೀಡಬೇಕೆಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು, ಎಸ್ಸಿ, ಎಸ್ಟಿ ಕಾಯ್ದೆಯ ಅನುಷ್ಠಾನ ಮತ್ತು ನಿಯಮಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು.

ಎಸ್ಸಿ, ಎಸ್ಟಿ ಕಾಯ್ದೆಗಳನ್ನು ಅನುಷ್ಠಾನಗೊಳಿಸುವುದು ರಾಜ್ಯ ಸರಕಾರದ ಕರ್ತವ್ಯವಾಗಿದ್ದು, ಜು.16ರೊಳಗೆ ಆಕ್ಷೇಪಣೆಗಳ ಹೇಳಿಕೆಯನ್ನು ಸಲ್ಲಿಸುವಂತೆ ನ್ಯಾಯಪೀಠವು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿತು.   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News