ಕೊರೋನ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಸನ್ನದ್ಧವಾಗಬೇಕು: ಜಗದೀಶ್ ಶೆಟ್ಟರ್

Update: 2020-06-29 18:05 GMT

ಧಾರವಾಡ, ಜೂ.29: ಕೊರೋನ ವೈರಾಣು ತಡೆಗೆ ಇದುವರೆಗೆ ಸರಕಾರಿ ಸ್ವಾಮ್ಯದ ಸಾರ್ವಜನಿಕ ಆಸ್ಪತ್ರೆಗಳು ಅವಿರತವಾಗಿ ಶ್ರಮಿಸುತ್ತಿವೆ. ಇನ್ನು ಮುಂದೆ ಪ್ರಕರಣಗಳು ಹೆಚ್ಚಾಗುವ ಸಂಭವ ಇರುವುದರಿಂದ ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳು ಕೊರೋನ ವಿರುದ್ಧದ ಈ ಹೋರಾಟದಲ್ಲಿ ಸರಕಾರದೊಂದಿಗೆ ಕೈಜೋಡಿಸಿ ಕೋವಿಡ್ ಚಿಕಿತ್ಸೆ ನೀಡಲು ಸನ್ನದ್ಧವಾಗಬೇಕು ಎಂದು ಬೃಹತ್ ಹಾಗೂ ಮದ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಸೋಮವಾರ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿ ಆಗಿರುವ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತಿಹಾಸದಲ್ಲಿಯೇ ಇಂತಹ ಪರಿಸ್ಥಿತಿ ಉದ್ಭವಿಸಿರಲಿಲ್ಲ. ಇದೊಂದು ತುರ್ತು ಸಂದರ್ಭವಾಗಿದೆ. ಸರಕಾರ ಯಾವತ್ತೂ ಖಾಸಗಿ ಆಸ್ಪತ್ರೆಗಳಿಗೆ ಒತ್ತಡ ಹೇರಿಲ್ಲ. ಇದುವರೆಗೆ ಸರಕಾರಿ ಆಸ್ಪತ್ರೆಗಳೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿವೆ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳೂ ಕೂಡಾ ತಮ್ಮಲ್ಲಿ ದಾಖಲಾಗುವ ರೋಗಿಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟರೆ ಅಲ್ಲಿಯೇ ಚಿಕಿತ್ಸೆ ನೀಡಬೇಕು. ಇದಕ್ಕಾಗಿ ಎಲ್ಲ ಅರೆ ವೈದ್ಯಕೀಯ ಮತ್ತು ಸಹಾಯಕ ಸಿಬ್ಬಂದಿಯನ್ನು ಅಣಿಗೊಳಿಸಬೇಕು ಎಂದು ಅವರು ಹೇಳಿದರು.

ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಬಾರದು. ಸರಕಾರ ಖಾಸಗಿ ಆಸ್ಪತ್ರೆಗಳ ಮೇಲೆ ಕಾನೂನು ಕ್ರಮ ಜರುಗಿಸುವ ಪರಿಸ್ಥಿತಿಗೆ ಅವಕಾಶ ನೀಡದಂತೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಎಲ್ಲ ರೀತಿಯ ಸಹಕಾರ ನೀಡಲಿವೆ ಎಂದು ಜಗದೀಶ್ ಶೆಟ್ಟರ್ ಭರವಸೆ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಇತರೆ ಸಾಮಾನ್ಯ ಖಾಯಿಲೆಗಳ ಚಿಕಿತ್ಸೆಗಾಗಿ ನೇರವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ವ್ಯಕ್ತಿಗಳಲ್ಲಿ ಕೋವಿಡ್ ದೃಢಪಟ್ಟರೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಆಸ್ಪತ್ರೆಗಳು ಚಿಕಿತ್ಸೆ ನೀಡಬೇಕು. ಸರಕಾರ ನಿಗದಿಪಡಿಸಿದ ಶುಲ್ಕವನ್ನು ಪಡೆಯಬೇಕು. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಚಿಕಿತ್ಸೆ ನೀಡಿದರೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವೆಚ್ಚ ಪಾವತಿಸಲಾಗುವುದು. ಸರಕಾರದ ನಿರ್ದೇಶನ ಪಾಲಿಸದಿದ್ದರೆ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಹಾಗೂ ಇತರೆ ಕಾಯ್ದೆಗಳ ಅಡಿ ಕ್ರಮ ಜರುಗಿಸುವ ಅವಕಾಶವಿದೆ ಎಂದರು.

ಸಭೆಯಲ್ಲಿ ಶಾಸಕರಾದ ಸಿ.ಎಂ.ನಿಂಬಣ್ಣವರ, ಅಮೃತ ದೇಸಾಯಿ, ಶಂಕರ ಪಾಟೀಲ್ ಮುನೇನಕೊಪ್ಪ, ವಿಧಾನಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಪೊಲೀಸ್ ಆಯುಕ್ತ ಆರ್. ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್  ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಭಾರತೀಯ ವೈದ್ಯಕೀಯ ಸಂಘದ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News