ಕೋವಿಡ್ ಸೋಂಕಿತರಿಗೆ ಹಾಸಿಗೆ ಒದಗಿಸಲು ಕೇಂದ್ರೀಕೃತ ವ್ಯವಸ್ಥೆ: ಮುಖ್ಯಮಂತ್ರಿ ಯಡಿಯೂರಪ್ಪ

Update: 2020-06-30 13:51 GMT

ಬೆಂಗಳೂರು, ಜೂ. 30: ಕೋವಿಡ್ ಸೋಂಕಿತರಿಗೆ ಹಾಸಿಗೆ ಹಂಚಿಕೆ ಕುರಿತಂತೆ ಕೇಂದ್ರೀಕೃತ ವ್ಯವಸ್ಥೆಯನ್ನು ಈಗಾಗಲೇ ಬಿಬಿಎಂಪಿಯಲ್ಲಿ ಮಾಡಲಾಗಿದ್ದು, ಎರಡು-ಮೂರು ದಿನಗಳಲ್ಲಿ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ. ಕೋವಿಡ್-19 ಚಿಕಿತ್ಸೆ ನೀಡುವ ಎಲ್ಲ ಆಸ್ಪತ್ರೆಗಳನ್ನು ಈ ವ್ಯವಸ್ಥೆಯ ವ್ಯಾಪ್ತಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಎರಡು ಸರಕಾರಿ ಸಂಸ್ಥೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ನಗರದ 11 ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 2200 ಹಾಸಿಗೆಗಳನ್ನು ಅಧಿಸೂಚಿಸಲಾಗಿದೆ ಎಂದರು.

ಪ್ರಸ್ತುತ ವರದಿಯಾಗುತ್ತಿರುವ ಕೊರೋನ ಸೋಂಕಿನ ಪ್ರಕರಣಗಳನ್ನು ಗಮನಿಸಿದರೆ, 4500 ಹಾಸಿಗೆಗಳನ್ನು ಖಾಸಗಿ ಕಾಲೇಜುಗಳಿಂದ ಸರಕಾರ ನಿರೀಕ್ಷಿಸುತ್ತಿದೆ. ನಾಲ್ಕು ತಿಂಗಳಿಂದ ಹತ್ತು ವೈದ್ಯಕೀಯ ಕಾಲೇಜುಗಳು ಹೊರತುಪಡಿಸಿ, ಇತರ ಎಲ್ಲ ಕಾಲೇಜುಗಳು ಪ್ರಯೋಗಾಲಯ ವ್ಯವಸ್ಥೆ ಮಾಡಿವೆ ಎಂದು ಯಡಿಯೂರಪ್ಪ ಅವರು ತಿಳಿಸಿದರು.

ಸರಕಾರಿ ಕಾಲೇಜುಗಳಲ್ಲಿ 2 ಸಾವಿರ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 4500 ಸೇರಿದಂತೆ ಸುಮಾರು 6500 ಹಾಸಿಗೆಗಳು ಬೆಂಗಳೂರಿನ ವೈದ್ಯಕೀಯ ಕಾಲೇಜುಗಳಲ್ಲಿಯೇ ಲಭ್ಯವಾಗುತ್ತಿವೆ. ಇದಕ್ಕೆ ಖಾಸಗಿ ವೈದ್ಯಕೀಯ ಕಾಲೇಜುಗಳು ಸಹಕರಿಸುವಂತೆ ಮನವಿ ಮಾಡಿದರು. ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಖಾಸಗಿಯವರೊಂದಿಗೆ ಸಮನ್ವಯಕ್ಕೆ ಸಮಿತಿ ರಚನೆ ಮಾಡಲಾಗುವುದು ಎಂದರು.

ವೈದ್ಯಕೀಯ ಕಾಲೇಜುಗಳು ಸರಕಾರದೊಂದಿಗೆ ಕೈಜೋಡಿಸಿ, ಕೋವಿಡ್ ಚಿಕಿತ್ಸೆಗೆ ಸಹಕರಿಸುವ ಭರವಸೆಯನ್ನು ನೀಡಿದರು. ಇದಕ್ಕೆ ಸಿದ್ಧತೆಗಳು ಮಾಡಿಕೊಳ್ಳಬೇಕಾಗಿರುವುದರಿಂದ ಹಂತ ಹಂತವಾಗಿ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ಕೋವಿಡ್ ಚಿಕಿತ್ಸೆ ನೀಡುವ ಖಾಸಗಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳಿಗೂ ವಿಮಾ ಸೌಲಭ್ಯ ಒದಗಿಸಲಾಗುವುದು. ಅಲ್ಲದೆ, ಟೆಲಿಮೆಡಿಸಿನ್ ಮೂಲಕ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು. ಕೋವಿಡ್ ಕೇರ್ ಸೆಂಟರ್‍ಗಳಿಗೆ ಅಗತ್ಯ ಸಿಬ್ಬಂದಿ ಒದಗಿಸಬೇಕು ಎಂದು ಅವರು ಮನವಿ ಮಾಡಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ಹಿರಿಯ ಅಧಿಕಾರಿ ಹಾಜರಿದ್ದರು.

ಸಾವಿಗೂ ಸೌಲಭ್ಯಕ್ಕೂ ಸಂಬಂಧ ಬೇಡ
'ಆಸ್ಪತ್ರೆಯಲ್ಲಿ ಯಾರೊ ಒಬ್ಬರೂ ಮೃತಪಟ್ಟಿರುವುದಕ್ಕೂ ಸೋಂಕಿತರಿಗೆ ಹಾಸಿಗೆ ಸೌಲಭ್ಯ ಸಿಗದಿರುವುದಕ್ಕೂ ಸಂಬಂಧ ಕಲ್ಪಿಸುವುದು ಸರಿಯಲ್ಲ. ರಾಜ್ಯ ಸರಕಾರ ಕೊರೋನ ಸೋಂಕು ನಿಯಂತ್ರಣಕ್ಕೆ ಶಕ್ತಿ ಮೀರಿ ಶ್ರಮಿಸುತ್ತಿದೆ. ಜನರು ಸಹಕಾರ ನೀಡದರೆ ಮಾತ್ರ ಸೋಂಕು ನಿಯಂತ್ರಣ ಸಾಧ್ಯ. ಸರಕಾರ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ'
-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News