ದ.ಕ. ಜಿಲ್ಲೆಯಲ್ಲಿ ಮತ್ತೆ 44 ಮಂದಿಗೆ ಕೊರೋನ: ಸೋಂಕಿತರ ಸಂಖ್ಯೆ 749ಕ್ಕೆ ಏರಿಕೆ

Update: 2020-06-30 14:40 GMT

ಮಂಗಳೂರು, ಜೂ. 30: ಕೊರೋನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ದ.ಕ. ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 44 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 749ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪೈಕಿ ಸೌದಿಯಿಂದ ಇಬ್ಬರು, ಅಂತರ್ ಜಿಲ್ಲೆ ಮೂರು, ಅಂತರ್ ರಾಜ್ಯ ಒಂದು, ಶೀತ, ಜ್ವರ ಲಕ್ಷಣದ ಒಂಬತ್ತು, ಉಸಿರಾಟ ಸಮಸ್ಯೆಯ ಮೂರು, ಮೂಲ ಪತ್ತೆಯಾಗದ ಐದು, ಪ್ರಾಥಮಿಕ ಸಂಪರ್ಕಿತ 21 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಎಲ್ಲ ಸೋಂಕಿತರನ್ನು ವೆನ್ಲಾಕ್ ಕೊವೀಡ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ವೃದ್ಧರಲ್ಲಿ ಸೋಂಕು; ಹೆಚ್ಚಿದ ಆತಂಕ: ಆರೋಗ್ಯ ಇಲಾಖೆಯಿಂದ ಮಂಗಳವಾರ ಪ್ರಕಟವಾದ ವರದಿಯಂತೆ ಜಿಲ್ಲೆಯ ಎಂಟು ವೃದ್ಧರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಪೈಕಿ ಇಬ್ಬರು (67, 65 ವರ್ಷ) ಮಹಿಳೆಯರಿದ್ದರೆ ಉಳಿದವರೆಲ್ಲ ಪುರುಷರು. 77, 72, 67, 67, 66, 63 ವರ್ಷದ ಪುರುಷರಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದ ಸಾರ್ವಜನಿಕ ವಲಯದಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.

17 ಮಂದಿ ಡಿಸ್ಚಾರ್ಜ್: ಸಮಾಧಾನಕರ ಬೆಳವಣಿಗೆಯಲ್ಲಿ ಮಂಗಳವಾರ 64 ವರ್ಷದ ವೃದ್ಧ ಸೇರಿದಂತೆ 17 ಮಂದಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಇದರೊಂದಿಗೆ 443 ಮಂದಿ ಇದುವರೆಗೆ ಸೋಂಕು ಮುಕ್ತರಾದಂತಾಗಿದೆ. ಈಗ ಚಿಕಿತ್ಸೆಯಲ್ಲಿರುವ ಬಹುತೇಕ ಮಂದಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

49 ವರ್ಷದ ವ್ಯಕ್ತಿಯು ಡಯಾಬಿಟಿಸ್‌ಮತ್ತು ನ್ಯುಮೋನಿಯದಿಂದ ಬಳಲುತ್ತಿದ್ದು, ಇವರನ್ನು ಐಸಿಯುನಲ್ಲಿ ದಾಖಲಿಸಿ, ಎಚ್‌ಎಫ್‌ಎನ್‌ಸಿ ಮೂಲಕ ಆಮ್ಲಜನಕ ನೀಡಲಾಗುತ್ತಿದೆ. 57 ವರ್ಷದ ಹೆಂಗಸನ್ನು ಲಿವರ್ ಕಾಯಿಲೆ, ಡಯಾಬಿಟಿಸ್, ಹೃದಯರೋಗ ಹಾಗೂ ನ್ಯುಮೋನಿಯದಿಂದ ಬಳಲುತ್ತಿದ್ದಾರೆ. ಇನ್ನು 78 ವರ್ಷದ ವೃದ್ಧನನ್ನು ಡಯಾಬಿಟಿಸ್, ಅಧಿಕ ರಕ್ತದೊತ್ತಡ, ಪಾರ್ಕಿನ್‌ಸನ್ ಕಾಯಿಲೆ ಮತ್ತು ನ್ಯುಮೋನಿಯದಿಂದ ಬಳಲುತ್ತಿದ್ದಾರೆ. 39 ವರ್ಷದ ಪುರುಷ ನ್ಯುಮೋನಿಯದಿಂದ ಬಳಲುತ್ತಿದ್ದು, ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಗಳವಾರ ಒಟ್ಟು 148 ವರದಿಗಳು ಪ್ರಯೋಗಾಲಯದಿಂದ ಬಂದಿದ್ದು, ಅವುಗಳಲ್ಲಿ 44 ಪಾಸಿಟಿವ್ ಆಗಿದ್ದರೆ, ಉಳಿದೆಲ್ಲವೂ ನೆಗೆಟಿವ್ ಆಗಿವೆ. ಹೊಸದಾಗಿ 316 ಮಂದಿಯ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಒಟ್ಟು 325 ಮಂದಿಯ ವರದಿ ಇನ್ನಷ್ಟೇ ಬರಲು ಬಾಕಿಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News