ಎರಡು ದಿನ ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

Update: 2020-07-02 14:59 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.2: ಕರಾವಳಿ ಭಾಗದಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-50 ಕಿ.ಮೀ ಇರುವುದರಿಂದ ಜು.3 ಮತ್ತು 4ರಂದು ಮೀನುಗಾರರಿಗೆ ಸಮುದ್ರಕ್ಕೆ ಇಳಿಯಬಾರದೆಂದು ಎಚ್ಚರಿಕೆ ನೀಡಲಾಗಿದೆ ಎಂದು ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ದಕ್ಷಿಣ ಒಳನಾಡು ಭಾಗದಲ್ಲಿ ವಾಡಿಕೆಗಿಂತ ಮಳೆ ಕಡಿಮೆ ಕಂಡುಬಂದಿದ್ದು, ಮುಂದಿನ ವಾರದಲ್ಲಿ ಮಳೆಯ ತೀವ್ರತೆ ಅಧಿಕವಾಗುವ ಹಿನ್ನೆಲೆಯಲ್ಲಿ ಮಳೆಯ ಪ್ರಮಾಣ ಸಾಮಾನ್ಯ ಮಟ್ಟಕ್ಕೆ ತಲುಪಬಹುದು ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಜೂ. 1ರಿಂದ ಇಲ್ಲಿಯವರೆಗೆ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಕೊಡಗು ಜಿಲ್ಲೆಗಳಲ್ಲಿ ವಾಡಿಕೆಗಿಂತ ಮಳೆ ಕೊರತೆ ಕಂಡು ಬಂದಿದೆ. ಮುಂದಿನ ವಾರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಜುಲೈ 2, 3 ಹಾಗೂ 4ರಂದು ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾಗಾಗಿ, ಈ 3 ದಿನ ಆರೆಂಜ್‍ ಅಲರ್ಟ್ ನೀಡಲಾಗಿದೆ. ಜು. 5-6 ರಂದು ಮಳೆ ಪ್ರಮಾಣ ತಗ್ಗಬಹುದಾದರೂ ಕೆಲವೆಡೆ ಮಳೆಯ ಅಬ್ಬರ ಜಾಸ್ತಿ ಇರಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ 5-6ರಂದು ಕೆಲವು ಕಡೆ ಮಳೆಯಾಗಬಹುದು ಎಂದು ಅವರು ಹೇಳಿದ್ದಾರೆ.

ಜು.2-3 ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ, ಬೀದರ್, ಗುಲ್ಬರ್ಗಾ, ವಿಜಾಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-50 ಕಿ.ಮೀ ಇರುವುದರಿಂದ ಜು.3 ಮತ್ತು 4ರಂದು ಮೀನುಗಾರರಿಗೆ ಸಮುದ್ರಕ್ಕೆ ಇಳಿಯಬಾರದೆಂದು ಎಚ್ಚರಿಕೆ ನೀಡಲಾಗಿದೆ ಎಂದು ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News