ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಮರು ನೇಮಕಕ್ಕೆ ಹೈಕೋರ್ಟ್ ಆದೇಶ

Update: 2020-07-02 17:57 GMT

ಬೆಂಗಳೂರು, ಜು.2: ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಅಮಾನತು ಆಗಿದ್ದ ಎಸ್.ಮೂರ್ತಿ ಅವರನ್ನು ಮೂರು ವಾರದೊಳಗೆ ಕಾರ್ಯದರ್ಶಿಯಾಗಿ ಮರು ನೇಮಕ ಮಾಡಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿದೆ.

ಅಮಾನತು ಆದೇಶ ರದ್ದು ಕೋರಿ ಎಸ್.ಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಬಿ.ಭಜಂತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಮೂರ್ತಿ ಅವರನ್ನು ಮೂರು ವಾರದೊಳಗೆ ಕಾರ್ಯದರ್ಶಿ ಹುದ್ದೆಗೆ ಮರು ನೇಮಕ ಮಾಡಿ ಎಂದು ರಾಜ್ಯ ಸರಕಾರಕ್ಕೆ ಆದೇಶಿಸಿತು.  

ನಿಯಮದಂತೆ ಅಮಾನತ್ತಾದ ಆರು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಬೇಕು. ಆದರೆ, ಈ ಪ್ರಕರಣ 18 ತಿಂಗಳು ಕಳೆದರೂ ವಿಚಾರಣೆ ಪೂರ್ಣಗೊಂಡಿಲ್ಲ. ಹೀಗಾಗಿ, ಇಲಾಖಾ ವಿಚಾರಣೆಯ ಫಲಿತಾಂಶ ಆಧರಿಸಿ ಎಸ್.ಮೂರ್ತಿ ಅವರನ್ನು ಮರು ನೇಮಕ ಮಾಡಲು ಹಾಗೂ ಬಾಕಿ ಉಳಿಸಿಕೊಂಡಿರುವ ಜೀವನಾಧಾರಿತ ಭತ್ಯೆ ಪಾವತಿಸಲು ನ್ಯಾಯಪೀಠವು ಸರಕಾರಕ್ಕೆ ಸೂಚನೆ ನೀಡಿದೆ. 

ವಿಧಾನಸಭೆ ಕಾರ್ಯದರ್ಶಿಯಾಗಿದ್ದ ಎಸ್.ಮೂರ್ತಿಯವರನ್ನು ಸೇವೆಯಿಂದ ಅಮಾನತುಗೊಳಿಸಿ ವಿಧಾನಸಭೆ ಅಧೀನ ಕಾರ್ಯದರ್ಶಿ 2018ರ ಡಿಸೆಂಬರ್ 27ರಂದು ಆದೇಶ ಹೊರಡಿಸಿದ್ದರು.

2016 ಹಾಗೂ 2017ನೆ ಸಾಲಿನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಅಧೀವೇಶನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕಾಮಗಾರಿ ಹಾಗೂ ಇತರೆ ಖರ್ಚು ವೆಚ್ಚಗಳಲ್ಲಿ ಅವ್ಯವಹಾರ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಧ್ಯಕ್ಷತೆಯ ಶಾಸಕಾಂಗದ ವಿಶೇಷ ಮಂಡಳಿಯ ಆದೇಶದ ಅನುಸಾರ ಎಸ್.ಮೂರ್ತಿಯವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೂರ್ತಿ ಹೈಕೋರ್ಟ್ ಮೆಟ್ಟಿಲೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News