ಎಸೆಸೆಲ್ಸಿ ಪರೀಕ್ಷಾ ಕೇಂದ್ರದ ಶಿಕ್ಷಕರಿಗೆ ಕೊರೋನ ಪರೀಕ್ಷೆ: ಉಡುಪಿ ಜಿಲ್ಲಾಧಿಕಾರಿ ಜಗದೀಶ್

Update: 2020-07-03 16:49 GMT

ಕುಂದಾಪುರ, ಜು.3: ಎಲ್ಲ ರೀತಿಯ ಮುಂಜಾಗೃತ ಕ್ರಮಗಳೊಂದಿಗೆ ಎಸೆಸೆಲ್ಸಿ ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಮುಗಿಸಿದ್ದೇವೆ. ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರಿಗೂ ಕೊರೋನ ಪರೀಕ್ಷೆ ನಡೆಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲ ಶಿಕ್ಷಕರ ಆರೋಗ್ಯದ ರಕ್ಷಣೆ ಮತ್ತು ಅವರಿಗೆ ಚಿಕಿತ್ಸೆ ನೀಡುವುದು ನಮ್ಮ ಹೊಣೆಯಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಕುಂದಾಪುರ ಜ್ಯೂನಿಯರ್ ಕಾಲೇಜಿನಲ್ಲಿರುವ ಎಸೆಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮ ವರೊಂದಿಗೆ ಮಾತನಾಡುತ್ತಿದ್ದರು.

ಜಿಲ್ಲೆಯ ಮೂವರು ವಿದ್ಯಾರ್ಥಿನಿಗಳಿಗೆ ಅವರ ಮನೆಯವರ ಮೂಲಕ ಕೊರೋನ ಸೋಂಕು ಹರಡಿದ್ದು, ಅದು ಬಿಟ್ಟು ಜಿಲ್ಲೆಯ ಪರೀಕ್ಷಾ ಕೇಂದ್ರ ಗಳಿಂದ ವಿದ್ಯಾರ್ಥಿಗಳಿಗೆ ಯಾವುದೇ ಸೋಂಕು ಹರಡಿಲ್ಲ ಎಂದ ಅವರು, ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಮೇಲೆ ನಂಬಿಕೆಯಿಟ್ಟು ಪೋಷಕರು ಮಕ್ಕಳನ್ನು ಪರೀಕ್ಷೆಗೆ ಕಳುಹಿಸಿದ್ದು, ಆ ನಂಬಿಕೆಯನ್ನು ಉಳಿಸಿಕೊಂಡು ಮಕ್ಕಳನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಿಕೊಟ್ಟಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಕುಂದಾಪುರ ಉಪವಿಭಾಗದ ಸಹಾಯಕ ಕಮಿಷನರ್ ಕೆ.ರಾಜು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News