ಇದು ಸಾಮಾಜಿಕ ನ್ಯಾಯಕ್ಕಾಗಿ ಬೇಡಿಕೆ: ನೀಟ್‌ನಲ್ಲಿ ಒಬಿಸಿ ಮೀಸಲಾತಿ ಕುರಿತು ಪ್ರಿಯಾಂಕಾ ಗಾಂಧಿ

Update: 2020-07-04 16:06 GMT

ಹೊಸದಿಲ್ಲಿ,ಜು.4: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ರಾಷ್ಟ್ರೀಯ ಕೋಟಾದಡಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ವಿದ್ಯಾರ್ಥಿಗಳಿಗೆ ಸ್ಥಾನಗಳ ಮೀಸಲಾತಿಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಬೇಡಿಕೆಯನ್ನು ಅವರ ಪುತ್ರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬೆಂಬಲಿಸಿ ಶನಿವಾರ ಟ್ವೀಟಿಸಿದ್ದಾರೆ.

ಈ ಬೇಡಿಕೆಯು ನ್ಯಾಯಬದ್ಧವಾಗಿದ್ದು, ಸಾಮಾಜಿಕ ನ್ಯಾಯವನ್ನು ಖಚಿತ ಪಡಿಸುತ್ತದೆ. ಕೇಂದ್ರ ಸರಕಾರವು ಇದನ್ನು ಜಾರಿಗೊಳಿಸುತ್ತದೆ ಎಂದು ತಾನು ಆಶಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ನೀಟ್‌ನ ಅಖಿಲ ಭಾರತ ಕೋಟಾದಡಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮೆಡಿಕಲ್ ಕಾಲೇಜುಗಳಲ್ಲಿ ಒಬಿಸಿಗಳಿಗೆ ಮೀಸಲಾತಿಗೆ ಆಗ್ರಹಿಸಿ ಸೋನಿಯಾ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರವನ್ನು ಬರೆದಿದ್ದಾರೆ. ಮೀಸಲಾತಿ ನಿರಾಕರಣೆಯಿಂದಾಗಿ 2017ರಿಂದ ಒಬಿಸಿ ವಿದ್ಯಾರ್ಥಿಗಳು 11,000 ಸೀಟ್‌ಗಳನ್ನು ಕಳೆದುಕೊಂಡಿದ್ದಾರೆ ಎಂದು ಅವರು ಪತ್ರದಲ್ಲಿ ಬೆಟ್ಟು ಮಾಡಿದ್ದಾರೆ.

ಅಖಿಲ ಭಾರತ ಕೋಟಾದಡಿ ಕೇಂದ್ರೀಯ ಮತ್ತು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ,ಎಸ್‌ಟಿ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಅನುಕ್ರಮವಾಗಿ ಶೇ.15,ಶೇ.7.5 ಮತ್ತು ಶೇ.10ರಷ್ಟು ಸೀಟ್‌ಗಳನ್ನು ಮೀಸಲಿರಿಸಲಾಗಿದೆ. ಆದರೆ ಅಖಿಲ ಭಾರತ ಕೋಟಾದಡಿ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿಯು ಕೇಂದ್ರೀಯ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗಿದೆ ಎಂದಿರುವ ಸೋನಿಯಾ,ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮೆಡಿಕಲ್ ಕಾಲೇಜುಗಳಲ್ಲಿ ಒಬಿಸಿಗಳಿಗೆ ಮೀಸಲಾತಿ ನಿರಾಕರಣೆಯು ಅರ್ಹ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣವನ್ನು ಪಡೆಯಲು ಅಡ್ಡಿಯಾಗಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News