​ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಕಾರ್ಯಕ್ರಮ ರೂಪಿಸಲು ಕರೆ

Update: 2020-07-04 17:30 GMT

ಮಂಗಳೂರು, ಜು.4: ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರಿಕೆಯ ವಿವಿಧ ರೀತಿಯ ಅಭಿವೃದ್ಧಿ ಆಯಾಮಗಳ ಬಗ್ಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಕಾರ್ಯಕ್ರಮ ರೂಪಿಸುವಂತೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಅಧಿಕಾರಿಗಳಿಗೆ ಕರೆ ನೀಡಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಸುಸ್ಥಿರ ಅಭಿವೃದ್ಧಿ ಗುರಿಗಳು 14 ಮತ್ತು 15ರಡಿ ಯೋಜನೆಗಳನ್ನು ರೂಪಿಸುವ ಬಗ್ಗೆ ಮೀನುಗಾರಿಕೆ ಮತ್ತು ಪ್ರವಾಸೋದ್ಯಮ ಇಲಾಖೆಗಳ ಅಧಿಕಾರಿಗಳ ಜೊತೆ ಶನಿವಾರ ಸಭೆ ನಡೆಸಿದ ಅವರು ಮೀನುಗಾರಿಕಾ ಬಂದರಿನಲ್ಲಿ ಮೂಲ ಸೌಲಭ್ಯ ಕಲ್ಪಿಸುವುದು, ಮೀನು ಉತ್ಪನ್ನ ಜಾಸ್ತಿಗೊಳಿಸುವ ಕುರಿತು ಒಳನಾಡು ಮೀನುಗಾರಿಕೆ ಕೈಗೊಳ್ಳವುದು, ಸಮುದ್ರ ಉತ್ಪನ್ನಗಳ ರಪ್ತು ದ್ವಿಗುಣಗೊಳಿಸುವುದು, ಪುಡ್‌ಪಾರ್ಕ್‌ಗಳು, ಆಹಾರ ಭದ್ರತೆ ಮತ್ತು ಆಧುನಿಕ ಮೂಲ ಸೌಕರ್ಯ ಒದಗಣೆ ಹಾಗೂ ಕಡಲತೀರದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸುವ ಬಗ್ಗೆ ಚರ್ಚಿಸಿದರು.

ತಲಪಾಡಿಯಿಂದ ಉತ್ತರ ಕನ್ನಡ ಜಿಲ್ಲೆಯ ಮಾಜಾಳಿವರೆಗಿನ ಮೀನುಗಾರಿಕಾ ರಸ್ತೆಯನ್ನು ಅಭಿವೃದ್ಧಿಪಡಿಸುವ ಕುರಿತು ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಡಿಪಿಆರ್ ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗಿದ್ದು, ಸದ್ರಿ ರಸ್ತೆಯ ಅಭಿವೃದ್ಧಿಯಿಂದ ಮೀನುಗಾರ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್‌ನ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಮೀನುಗಾರಿಕಾ ವಿವಿಯ ಡೀನ್ ಡಾ.ಎ.ಸೆಂಥಿಲ್‌ವೇಲ್, ಮೀನುಗಾರಿಕಾ ಉಪನಿರ್ದೇಶಕ ಪಾಶ್ವನಾಥ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಉದಯ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿಗಳು, ಮೀನುಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿಗಳು ಉಪಸ್ಥಿತರಿದ್ಧರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News