ಸೋಂಕಿತರ ಪ್ರದೇಶಗಳ ಕಟ್ಟುನಿಟ್ಟಿನ ಸೀಲ್‍ಡೌನ್‍ಗೆ ಮುಖ್ಯಮಂತ್ರಿ ಸೂಚನೆ: ಸಚಿವ ಡಾ.ಸುಧಾಕರ್

Update: 2020-07-04 18:22 GMT

ಬೆಂಗಳೂರು, ಜು. 4: ಕೊರೋನ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿರುವ ಕಂಟೈನ್ಮೆಂಟ್ ಝೋನ್‍ಗಳು ಸೇರಿದಂತೆ ಸೋಂಕು ಕಾಣಿಸಿಕೊಂಡಿರುವ ಪ್ರದೇಶಗಳನ್ನು ಕಟ್ಟುನಿಟ್ಟಾಗಿ ಸೀಲ್‍ಡೌನ್ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾರೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಶನಿವಾರ ಸಿಎಂ ನೇತೃತ್ವದ ಕೋವಿಡ್ ನಿಯಂತ್ರಣ ಟಾಸ್ಕ್ ಫೋರ್ಸ್ ಸಭೆಯ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳಿಂದ ಈಚೆಗೆ ಬೆಂಗಳೂರು ನಗರದ ಕೆಲವೆಡೆ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಅಂತಹ ಪ್ರದೇಶಗಳನ್ನು ಗುರುತಿಸಿ ಕಟ್ಟುನಿಟ್ಟಾಗಿ ಸೀಲ್‍ಡೌನ್ ಮಾಡಬೇಕು. ಅಲ್ಲದೆ, ಯಾವುದೇ ಕಾರಣಕೂ ಸೋಂಕು ಹರಡದಂತೆ ಸೂಕ್ತ ಮುನ್ನಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಿದ್ದಾರೆಂದು ಹೇಳಿದರು.

ಸಚಿವರು, ಅಧಿಕಾರಿಗಳು, ವೈದ್ಯರು ಮತ್ತು ಎಲ್ಲ ಸಿಬ್ಬಂದಿ ಪರಿಶ್ರಮದಿಂದ ಕೆಲಸ ಮಾಡಿದ್ದರಿಂದಲೇ ಕರ್ನಾಟಕ ಇಂದು ಸಮಾಧಾನಕರ ಸ್ಥಿತಿಯಲ್ಲಿದೆ. ಇತ್ತೀಚೆಗೆ ಬೆಂಗಳೂರು ನಗರ ಮತ್ತು ಕೆಲ ಜಿಲ್ಲೆಗಳಲ್ಲಿ ಅನೇಕ ಕಾರಣಗಳಿಂದ ಸೋಂಕು ಹೆಚ್ಚಿದೆ. ಅದನ್ನು ನಿಯಂತ್ರಿಸಿ ಕೋವಿಡ್ ಸೋಂಕು ಹಿಮ್ಮೆಟ್ಟಿಸಲು ಮುಂದಿನ ದಿನಗಳಲ್ಲಿ ಎಲ್ಲರೂ ಇನ್ನಷ್ಟು ಪರಿಶ್ರಮದಿಂದ ಕಾರ್ಯನಿರ್ವಹಿಸಬೇಕು ಎಂದರು.

ಜವಾಬ್ದಾರಿ ಹಂಚಿಕೆ: ಇಡೀ ವ್ಯವಸ್ಥೆ ಅಚ್ಚುಕಟ್ಟಾಗಿ, ಪಾರದರ್ಶಕ ರೀತಿಯಲ್ಲಿ ಕಾರ್ಯಾಚರಿಸಬೇಕು. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ದೊರೆಯುವ ವ್ಯವಸ್ಥೆ ಆಗಬೇಕು. ಈ ನಿಟ್ಟಿನಲ್ಲಿ ಸಚಿವರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿರುವ ಸಿಎಂ, ಕೋವಿಡ್-19 ವಿಷಯಕ್ಕೆ ಸಂಬಂಧಿಸಿದ ಎಲ್ಲ ನೀತಿ ನಿರೂಪಣೆ, ಮಾರ್ಗಸೂಚಿ, ಮಾಧ್ಯಮಗಳಿಗೆ ಮಾಹಿತಿ ನೀಡುವುದು, ವಾರ್ ರೂಮ್ ಜವಾಬ್ದಾರಿಯನ್ನು ತಮಗೆ ವಹಿಸಲಾಗಿದೆ ಎಂದು ಸುಧಾಕರ್ ವಿವರಿಸಿದರು.

ಕೋವಿಡ್ ಕೇರ್ ಸೆಂಟರ್‍ಗಳ ಸ್ಥಾಪನೆ ಮತ್ತು ನಿರ್ವಹಣೆಯನ್ನು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರಿಗೆ ಹಂಚಿಕೆ ಮಾಡಲಾಗಿದೆ. ಕಂದಾಯ ಸಚಿವ ಆರ್.ಅಶೋಕ್ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಸ್. ಆರ್. ವಿಶ್ವನಾಥ್ ಅವರಿಗೆ ಖಾಸಗಿ ಆಸ್ಪತ್ರೆಗಳ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ. ಎಲ್ಲರೂ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸಿಎಂ ಬಿಎಸ್‍ವೈ ಸಲಹೆ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಕಾನೂನು ಕ್ರಮದ ಎಚ್ಚರಿಕೆ: ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳಪೆ ಪಿಪಿಇ ಕಿಟ್ ನೀಡಲಾಗಿದೆ ಎಂಬ ವರದಿ ಮತ್ತು ಅದನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಬೀದಿಗೆ ಎಸೆದ ವಿಷಯ ಗಮನಕ್ಕೆ ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಖಾಸಗಿ ಆಸ್ಪತ್ರೆಗಳಿಂದ ಮುಂದೆ ಇಂತಹ ಘಟನೆ ಮರುಕಳಿಸದಂತೆ ಸೂಚನೆ ನೀಡಲಾಗಿದೆ. ಇಷ್ಟರ ಮೇಲೂ ಅಂತಹ ಪ್ರಕರಣ ಮರುಕಳಿಸಿದರೆ ಎಚ್ಚರಿಕೆ ನೀಡಲಾಗುವುದು. ಆಗಲೂ ಪರಿಸ್ಥಿತಿ ಸರಿಯಾಗದಿದ್ದಲ್ಲಿ ಕಾನೂನು  ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಲಾಕ್‍ಡೌನ್ ಅಗತ್ಯವಿಲ್ಲ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಲಾಕ್‍ಡೌನ್ ವಿಚಾರವು ಚರ್ಚೆ ಮಾಡಿದ್ದು, ಈ ಸನ್ನಿವೇಶದಲ್ಲಿ ಲಾಕ್‍ಡೌನ್ ಬೇಕಿಲ್ಲ ಎಂದು ತಾವು ಮತ್ತು ಡಿಸಿಎಂ ಅಶ್ವತ್ಥನಾರಾಯಣ ಅವರು ಸಿಎಂ ಅವರಿಗೆ ಹೇಳಿದ್ದೇವೆ. ಮುಂದೆ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ. ಈಗಾಗಲೇ ಸಿಎಂ ಅವರು ಪ್ರಕಟಿಸಿದ್ದಂತೆ ರವಿವಾರ ಮತ್ತು ರಾತ್ರಿ ಕರ್ಫ್ಯೂ ಮುಂದಿನ ಆದೇಶದವರೆಗೆ ಮುಂದುವರಿಯಲಿದೆ ಎಂದು ಅವರು ಪ್ರತಿಕ್ರಿಯಿಸಿದರು.

ಟಾಸ್ಕ್ ಫೋರ್ಸ್ ಸಭೆಯಲ್ಲಿ ಡಿಸಿಎಂ ಅಶ್ವತ್ಥನಾರಾಯಣ, ಸಚಿವರಾದ ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಆರ್. ಅಶೋಕ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಮತ್ತು ಹಿರಿಯ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News