ಹೊರ ರಾಜ್ಯಗಳಿಂದ ಆಗಮಿಸುವವರಿಗೆ 14 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯ: ರಾಜ್ಯ ಸರಕಾರ ಆದೇಶ

Update: 2020-07-06 12:08 GMT

ಬೆಂಗಳೂರು, ಜು. 6: ಮಹಾರಾಷ್ಟ್ರ, ತಮಿಳುನಾಡು, ಹೊಸದಿಲ್ಲಿ ಸೇರಿದಂತೆ ಹೊರ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ 14 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಿ ರಾಜ್ಯ ಸರಕಾರ ಸೋಮವಾರ ಹೊಸ ಆದೇಶ ಹೊರಡಿಸಿದೆ.

ಮಾರಕ ಕೊರೋನ ವೈರಸ್ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಮಹಾರಾಷ್ಟ್ರ ಸೇರಿದಂತೆ ಇತರೆ ಯಾವುದೇ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು ಮತ್ತು ಇತರರು 14 ದಿನಗಳ ಕಾಲ ಹೋಂ ಕ್ವಾರಂಟೈನ್‍ಗೆ ಒಳಗಾಗುವುದು ಕಡ್ಡಾಯ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ಆನ್‍ಲಾಕ್-02ನಲ್ಲಿ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ಹೇರಿದ್ದ ನಿರ್ಬಂಧ ಸಡಿಲಿಸಲಾಗಿತ್ತು. ಈ ಅವಧಿಯಲ್ಲಿ ಮಹಾರಾಷ್ಟ್ರ ರಾಜ್ಯದಿಂದ ಬರುವವರಿಗೆ 7 ದಿನ ಸಾಂಸ್ಥಿಕ ಮತ್ತು 7 ದಿನ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿತ್ತು. ಉಳಿದ ರಾಜ್ಯಗಳಿಂದ ಆಗಮಿಸುವವರಿಗೆ ಮೂರು ದಿನ ಸಾಂಸ್ಥಿಕ ಮತ್ತು 11 ದಿನ ಹೋಂ ಕ್ವಾರಂಟೈನ್ ವಿಧಿಸಲಾಗಿತ್ತು.

ಒಂದು ವಾರದಿಂದ ರಾಜ್ಯದಲ್ಲಿ ಕೊರೋನ ಸೋಂಕಿತರ ಪ್ರರಣಗಳು ಮಿತಿ ಮೀರುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ, ಹೊರ ರಾಜ್ಯಗಳಿಂದ ಯಾರೇ ರಾಜ್ಯಕ್ಕೆ ಆಗಮಿಸಿದರೂ ಅವರು 14 ದಿನಗಳ ಕಾಲ ಕಡ್ಡಾಯವಾಗಿ ಹೋಮ್ ಕ್ವಾರಂಟೈನ್‍ಗೆ ಒಳಗಾಗಬೇಕು ಎಂದು ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News