ಕೊಡಗು ಜಿಲ್ಲೆಯಲ್ಲಿ ಕೋವಿಡ್‍ 19ಗೆ ಮೊದಲ ಬಲಿ

Update: 2020-07-06 12:32 GMT
ಸಾಂದರ್ಭಿಕ ಚಿತ್ರ

ಮಡಿಕೇರಿ, ಜು.6: ಕೊಡಗು ಜಿಲ್ಲೆಯಲ್ಲಿ ಮಹಾಮಾರಿ ಕೊರೋನ ರಣಕೇಕೆ ಮುಂದುವರಿದಿದ್ದು, ರವಿವಾರ ಮತ್ತೆ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ ಕುಶಾಲನಗರದ ದಂಡಿನ ಪೇಟೆಯ 58 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದು, ಇದು ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದ ಮೊದಲ ಪ್ರಕರಣವಾಗಿದೆ.

ಮೃತರು ಬೆಂಗಳೂರಿನ ಜ್ಯೋತಿನಗರದ ನಿವಾಸಿಯಾಗಿದ್ದು, ಕುಶಾಲನಗರದ ದಂಡಿನಪೇಟೆಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರೆನ್ನಲಾಗಿದೆ. ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ ಅರ್ಧ ಗಂಟೆಯಲ್ಲೇ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯ ಆರೋಗ್ಯ ಮತ್ತು ಚಿಕಿತ್ಸೆ ಪಡೆದಿರುವ ಇತಿಹಾಸವನ್ನು ಪರಿಶೀಲಿಸಿದ್ದು, ಅವರು ಸುಮಾರು 10 ವರ್ಷಗಳಿಂದ ಸಕ್ಕರೆ ಖಾಯಿಲೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದುದಾಗಿ ಹೇಳಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಮೃತ ವ್ಯಕ್ತಿಯ ಗಂಟಲು-ಮೂಗು ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ತೆಗೆದು ಪರೀಕ್ಷೆಗೆ ಒಳಪಡಿಸಿದಾಗ ಮೃತ ವ್ಯಕ್ತಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಅಂತ್ಯ ಸಂಸ್ಕಾರ
ವ್ಯಕ್ತಿಯು ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟ ಕಾರಣ ಸರ್ಕಾರದ ಮಾರ್ಗಸೂಚಿಯಂತೆ ಅನುಸರಿಸಬೇಕಾದ ಕಾರ್ಯ ವಿಧಾನವನ್ನು ಅನುಸರಿಸಿ ಅಂತ್ಯ ಸಂಸ್ಕಾರವನ್ನು ಕೊಡಗು ಜಿಲ್ಲಾಡಳಿತದ ಸಹಕಾರದೊಂದಿಗೆ ಇಸ್ಲಾಮಿಕ್ ವಿಧಿ ವಿಧಾನಗಳ ಪ್ರಕಾರ ಮಡಿಕೇರಿಯ ರಾಣಿ ಪೇಟೆಯ ಕಬರ್ ಸ್ಥಾನದಲ್ಲಿ ನೆರವೇರಿಸಲಾಗಿದೆ. ಇದರಿಂದಾಗಿ ಜನರು ಭಯಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಸೋಂಕಿತರ ಸಂಖ್ಯೆ 78
ಮತ್ತೊಂದೆಡೆ ಕುಶಾಲನಗರ ಸಮೀಪದ ಬಸವನಹಳ್ಳಿಯ 31 ವರ್ಷದ ಪುರುಷರೊಬ್ಬರಲ್ಲೂ ಸೋಂಕು ದೃಢಪಟ್ಟಿದೆ. ಇವರ ಪತ್ನಿ ಆರೋಗ್ಯ ಕಾರ್ಯಕರ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರಪೇಟೆ ತಾಲೂಕಿನ ಕುಶಾಲನಗರದ ದಂಡಿನಪೇಟೆ ಹಾಗೂ ಬಸವನಹಳ್ಳಿಯಲ್ಲಿ ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ 78ಕ್ಕೆ ಏರಿಕೆಯಾಗಿದ್ದು, ಒಬ್ಬರು ಮೃತಪಟ್ಟು, ಮೂವರು ಗುಣಮುಖರಾಗಿದ್ದಾರೆ. 74 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 32 ನಿಯಂತ್ರಿತ ಪ್ರದೇಶಗಳನ್ನು ತೆರೆದಂತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News