ಡಾ.ಬಾಬು ಜಗಜೀವನರಾಂ ಜೀವನ ಚರಿತ್ರೆಯನ್ನು ಯುವಪೀಳಿಗೆಗೆ ಪರಿಚಯಿಸಲು ಸಿಎಂ ಯಡಿಯೂರಪ್ಪ ಕರೆ

Update: 2020-07-06 12:51 GMT

ಬೆಂಗಳೂರು, ಜು. 6: ಹಸಿರು ಕ್ರಾಂತಿ ಹರಿಕಾರ, ರಾಷ್ಟ್ರನಾಯಕ, ಮಾಜಿ ಉಪಪ್ರಧಾನಮಂತ್ರಿ ಡಾ.ಬಾಬು ಜಗಜೀವನರಾಂ ಅವರ ಆದರ್ಶ, ಚಿಂತನೆಗಳು ಎಲ್ಲ ಕಾಲಕ್ಕೂ ಮಾದರಿಯಾಗಿದ್ದು, ಅವರ ವ್ಯಕ್ತಿತ್ವ ಹಾಗೂ ಜೀವನ ಚರಿತ್ರೆಯನ್ನು ಯುವಪೀಳಿಗೆಗೆ ಪರಿಚಯಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಕರೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದ ಆವರಣದಲ್ಲಿ ಡಾ.ಬಾಬು ಜಗಜೀವನರಾಂ ಅವರ ಪುಣ್ಯಸ್ಮರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿದ ನಂತರ ಮಾತನಾಡಿದ ಅವರು, ಶೋಷಿತರ ಹಕ್ಕುಗಳಿಗಾಗಿ ಹೋರಾಟ ಮಾಡಿದ ಮಹಾನ್ ನಾಯಕ ಬಾಬು ಜಗಜೀವನರಾಂ ಅವರು ಶೋಷಿತರ ಆಶಾಕಿರಣರಾಗಿದ್ದಾರೆ. ನಾಲ್ಕು ದಶಕಗಳ ಕಾಲ ಸಂಸತ್ ಸದಸ್ಯರಾಗಿ ಅಪರಿಮಿತವಾಗಿ ಸೇವೆ ಸಲ್ಲಿಸಿದ್ದಾರೆ ಎಂದರು.

ರಾಜ್ಯದ, ರಾಷ್ಟ್ರದ ಕೃಷಿ ಸಚಿವರಾಗಿ ಹಸಿರು ಕ್ರಾಂತಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಸ್ವಾತಂತ್ರೋತ್ತರ ಭಾರತದಲ್ಲಿ ಆಹಾರ ಕೊರತೆ ಎದುರಾದಾಗ ಸುಧಾರಿತ ಬಿತ್ತನೆ ಬೀಜ ಹಾಗೂ ಸುಧಾರಿತ ತಳಿಗಳನ್ನು ಆಳವಡಿಸಿಕೊಂಡು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ, ಹಸಿರುಕ್ರಾಂತಿಯ ಹರಿಕಾರ ಎಂದೇ ಖ್ಯಾತಿಯಾಗಿದ್ದಾರೆ ಎಂದು ಬಣ್ಣಿಸಿದರು.

ರಕ್ಷಣಾ ಸಚಿವರಾಗಿ ಗುರುತರವಾಗಿ ಸೇವೆ ಸಲ್ಲಿಸಿದ್ದಾರೆ. ರಾಷ್ಟ್ರದ ಬೆನ್ನೆಲುಬು ರೈತ ಹಾಗೂ ಯೋಧ ಈ ಎರಡೂ ಸಮುದಾಯಕ್ಕೆ ಡಾ. ಬಾಬು ಜಗಜೀವನ ರಾಂ ಅವರ ಮಾರ್ಗದರ್ಶನ ಹಾಗೂ ನಾಯಕತ್ವ  ಉಲ್ಲೇಖನಾರ್ಹವಾಗಿದೆ. ಅವರ ಸಾಮಾಜಿಕ ಕಳಕಳಿ ಹಾಗೂ ರಾಜಕೀಯ ವಿಚಾರಧಾರೆಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಯಡಿಯೂರಪ್ಪ ತಿಳಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ನಾರಾಯಣಸ್ವಾಮಿ, ಮಾಜಿ ಸಚಿವ ಎಚ್.ಆಂಜನೇಯ ಮಾಲಾರ್ಪಣೆ ಸಲ್ಲಿಸಿದರು.

ಈ ವೇಳೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಬಾಸ್ಕರ್, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಆಯುಕ್ತ ರವಿಕುಮಾರ್ ಸುರಪುರ್, ಸಲಹೆಗಾರ ಇ. ವೆಂಕಟಯ್ಯ, ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಅಪರ ನಿರ್ದೇಶಕ ನಾಗೇಶ್, ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕ ನಟರಾಜ್, ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹನುಮನರಸಯ್ಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News