ಕೊರೋನ ವಾರಿಯರ್ಸ್ ಗಳು ಮಾನಸಿಕವಾಗಿ ಕುಗ್ಗುತ್ತಿದ್ದಾರೆ: ಸಚಿವ ಆನಂದ್ ಸಿಂಗ್

Update: 2020-07-08 13:07 GMT

ಬಳ್ಳಾರಿ, ಜು.8: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ, ಕೊರೋನ ವಾರಿಯರ್ಸ್ ಗಳು ಮಾನಸಿಕವಾಗಿ ಕುಗ್ಗುತ್ತಿದ್ದು, ಅವರಿಗೆ ಧೈರ್ಯ ತುಂಬುವ ಕೆಲಸವನ್ನೂ ಮಾಡಬೇಕಾಗಿದೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.    

ಬಳ್ಳಾರಿ ನಗರದ ಸರಕಾರಿ ದಂತ ವೈದ್ಯಕೀಯ ಕಾಲೇಜಿನ ಕೊರೋನ ಪೀಡಿತರ ಐಸೊಲೆಷನ್ ವಾರ್ಡಿಗೆ ಬುಧವಾರ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು.

ಸೋಂಕು ನಿಯಂತ್ರಣ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಕೊರೋನ ಸೋಂಕು ಹೆಚ್ಚಾಗುತ್ತಿದೆ. ಕೊರೋನ ವಾರಿಯರ್ಸ್ ಗಳಿಗೂ ಧೈರ್ಯ ಕಳೆದುಕೊಳ್ಳದೇ ನಿಮ್ಮ ಕೆಲಸವನ್ನು ಮುಂದುವರಿಸಿ ಎಂದು ಹೇಳಿದ್ದೇನೆ ಎಂದು ತಿಳಿಸಿದರು.

ನಿಯಮಗಳನ್ನು ಪಾಲಿಸದವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿ ಎಂದು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಪ್ರತಿಯೊಬ್ಬರು ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಬೇಕು ಮತ್ತು ಆಗಾಗ ಕೈಗಳನ್ನು ತೊಳೆದುಕೊಳ್ಳಬೇಕು ಎಂದು ಹೇಳಿದರು.

ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನ ಸೇರಿದ ಸಂದರ್ಭದಲ್ಲಿ ಈ ನಿಯಮಗಳ ಉಲ್ಲಂಘನೆ ಮಾಡಿರುವುದು ಕಂಡು ಬಂದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಕೊರೋನ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.

ಐಸೊಲೇಷನ್ ವಾರ್ಡ್ ಗೆ ಆನಂದ್ ಸಿಂಗ್ ಭೇಟಿ

ಬಳ್ಳಾರಿ ನಗರದ ಸರಕಾರಿ ದಂತ ವೈದ್ಯಕೀಯ ಕಾಲೇಜಿನ ಕೊರೋನ ಪೀಡಿತರ ಐಸೊಲೇಷನ್ ವಾರ್ಡ್ ಗೆ ಭೇಟಿ ನೀಡಿದ ಸಚಿವ ಆನಂದ್ ಸಿಂಗ್, ಸೋಂಕಿತರ ಅಹವಾಲುಗಳನ್ನು ಆಲಿಸಿ, ವಾರ್ಡ್ ನಲ್ಲಿ ಗುಣಮಟ್ಟದ ಊಟ, ಚಿಕಿತ್ಸೆ ಕೊಡಲಾಗುತ್ತಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News