ಕಾಪು: ಬೆಲೆಯೇರಿಕೆ ನೀತಿ ಖಂಡಿಸಿ ಮನವಿ ಸಲ್ಲಿಕೆ

Update: 2020-07-09 17:53 GMT

ಕಾಪು : ಕೇಂದ್ರ ಸರ್ಕಾರದ ನಿರಂತರ ಬೆಲೆಯೇರಿಕೆ ನೀತಿಯನ್ನು ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಕಾಪುವಿನಲ್ಲಿ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. 

ಕಾಪು ರಾಜೀವ್ ಭವನದಿಂದ ತಹಶೀಲ್ದಾರ್ ಕಚೇರಿಗೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ನೂರಾರು ಮಂದಿ ತಹಶೀಲ್ದಾರ್ ಕಚೇರಿಗೆ ಆಗಮಿಸಿ ತಹಶೀಲ್ದಾರ್ ಮುಹಮ್ಮದ್ ಇಸಾಕ್ ಅವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಸೊರಕೆ, ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರನ್ನು ಬೀದಿಗೆ ತಂದು ನಿಲ್ಲಿಸಿದೆ. ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಬೆಲೆ ಏರಿಕೆಯಿಂದ ತೊಂದರೆಯಾಗುತ್ತಿದೆ. ಅನೇಕ ಮಂದಿ ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಸಾಮಾನ್ಯ ವರ್ಗದ ಜನರು ತೀವ್ರ ಸಂಕಷ್ಟದಲ್ಲಿರುವಾಗ ಕೇಂದ್ರ ಸರಕಾರ ತೈಲ ಬೆಲೆ ಏರಿಕೆ ಮಾಡುವ ಮೂಲಕ ದೇಶದ ಜನರಿಂದ ಹಣ ದೋಚುತ್ತಿದೆ. ತಕ್ಷಣವೇ ತೈಲ ಬೆಲೆಯನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಇಳಿಕೆ ಮಾಡಬೇಕು. ಇಲ್ಲದಿದ್ದರೆ ಬರುವ ದಿನಗಳಲ್ಲಿಇನ್ನೂ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪಕ್ಷದ ಮುಖಂಡರಾದ ನವೀನ್‍ಚಂದ್ರ ಜೆ. ಶೆಟ್ಟಿ, ಅಬ್ದುಲ್ ಅಜೀಜ್, ವೈ. ಸುಕುಮಾರ್, ಹರೀಶ್ ಶೆಟ್ಟಿ ಪಾಂಗಾಳ, ಸರಸು ಡಿ. ಬಂಗೇರ, ಸುನೀಲ್ ಬಂಗೇರ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್, ಪ್ರವೀಣ್ ಶೆಟ್ಟಿ ಕೊರಂಗ್ರಪಾಡಿ, ಕಾಪು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಸಾದಿಕ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಬಿ. ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯರು, ಪುರಸಭೆ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪಕ್ಷದ ಬ್ಲಾಕ್, ಬೂತ್ ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News