ಕೋವಿಡ್ ನಿಯಂತ್ರಣ ವಿಷಯ ರಾಜಕೀಯಗೊಳಿಸಬೇಡಿ: ಸಂಸದ ಸುರೇಶ್‍ ಅಂಗಡಿ

Update: 2020-07-10 13:30 GMT

ಬೆಳಗಾವಿ, ಜು.10: ರಾಜ್ಯದಲ್ಲಿ ಕೊರೋನ ನಿಯಂತ್ರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಅವರ ವಿರುದ್ಧ ಟೀಕೆ ಮಾಡುವ ಮೂಲಕ ಇದನ್ನು ರಾಜಕೀಯಗೊಳಿಸಬಾರದು ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೆರೆಯ ರಾಜ್ಯವಾದ ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕರಾದ ದೇವೇಂದ್ರ ಫಡ್ನವೀಸ್ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆದರೆ, ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಕೇವಲ ಟೀಕೆಗಳನ್ನು ಮಾಡುವುದರಲ್ಲಿ ಕಳೆಯುತ್ತಿದ್ದಾರೆ. ಸಿದ್ದರಾಮಯ್ಯ ಸರಕಾರದ ಜತೆಗೆ ನಿಂತು ಈ ಮಹಾಮಾರಿಯನ್ನು ನಿಯಂತ್ರಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು.

ಕೋವಿಡ್ 19 ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ಕ್ರಮಗಳನ್ನು ವಿವಿಧ ರಾಷ್ಟ್ರಗಳು ಪ್ರಶಂಸಿಸುತ್ತಿದ್ದರೆ, ಸ್ಥಳೀಯ ಕೆಲವು ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವುದು ದುರ್ದೈವ ಎಂದು ಸುರೇಶ್ ಅಂಗಡಿ ವಿಷಾದ ವ್ಯಕ್ತಪಡಿಸಿದರು.

ದೇಶದ 80 ಕೋಟಿ ಜನರಿಗೆ ಅಕ್ಕಿ, ಬೇಳೆ ನೀಡುವ ನಿರ್ಧಾರವನ್ನು ಮೋದಿಯವರು ಕೈಗೊಂಡಿದ್ದಾರೆ. ಸ್ವಗ್ರಾಮಗಳಿಗೆ ವಾಪಸ್ಸಾಗಿರುವ ವಲಸೆ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಲು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಎಲ್ಲ ವರ್ಗದ ಜನರನ್ನು ಒಳಗೊಂಡಂತೆ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ್ದಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News