ಶರ್ಜೀಲ್ ಇಮಾಮ್ ಪ್ರಕರಣ: ವಿಚಾರಣಾ ನ್ಯಾಯಾಲಯದ ಆದೇಶ ಎತ್ತಿಹಿಡಿದ ಹೈಕೋರ್ಟ್

Update: 2020-07-10 17:51 GMT

ಹೊಸದಿಲ್ಲಿ, ಜು.10: ಜೆಎನ್ ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ದಿಲ್ಲಿ ಹೈಕೋರ್ಟ್ ಎತ್ತಿಹಿಡಿದಿದ್ದು, ಈ ಪ್ರಕರಣದಲ್ಲಿ ಡಿಫಾಲ್ಟ್ ಜಾಮೀನು ನೀಡಲು ನಿರಾಕರಿಸಿದೆ.

ಪೌರತ್ವ ಕಾಯ್ದೆಯನ್ನು ವಿರೋಧಿಸಿ ನಡೆದಿದ್ದ ಪ್ರತಿಭಟನೆ ಸಂದರ್ಭ ಶರ್ಜೀಲ್ ಇಮಾಮ್ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂಬ ದೂರಿನಡಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆಗೆ ಇನ್ನಷ್ಟು ಸಮಯಾವಕಾಶ ಕೋರಿದ್ದನ್ನು ವಿಚಾರಣಾ ನ್ಯಾಯಾಲಯ ಪುರಸ್ಕರಿಸಿತ್ತು.

ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದ ಇಮಾಮ್, ಕಾನೂನು ಪ್ರಕಾರ 90 ದಿನದೊಳಗೆ ಪೊಲೀಸರು ತನಿಖೆ ಮುಗಿಸಬೇಕಿತ್ತು. ಆದರೆ ಅವರು ವಿಫಲರಾದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯ ಮತ್ತೂ 3 ತಿಂಗಳು ಹೆಚ್ಚಿನ ಸಮಯಾವಕಾಶ ಒದಗಿಸಿದೆ. ಆದ್ದರಿಂದ ತನಗೆ ಡಿಫಾಲ್ಟ್ ಜಾಮೀನು ನೀಡಬೇಕು ಎಂದು ಕೋರಿದ್ದರು.

ಆದರೆ ದಿಲ್ಲಿ ಪೊಲೀಸರನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅಮನ್ ಲೇಖಿ, ಕೊರೋನ ವೈರಸ್ ಪಿಡಗುನಿಂದಾಗಿ ತನಿಖೆಗೆ ಅಡ್ಡಿಯಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದನ್ನು ಮಾನ್ಯ ಮಾಡಿದ ಹೈಕೋರ್ಟ್, ಕೆಳ ನ್ಯಾಯಾಲಯದ ಆದೇಶವನ್ನು ಪುರಸ್ಕರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News