ವಾರ್ತಾ ಇಲಾಖೆಯ ನಿವೃತ್ತ ಅಧಿಕಾರಿ ಸಿ.ಎಸ್.ಪದ್ಮನಾಭ ನಿಧನ
ಬೆಂಗಳೂರು, ಜು.11: ವಾರ್ತಾ ಇಲಾಖೆಯ ನಿವೃತ್ತ ಅಧಿಕಾರಿ ಸಿ.ಎಸ್.ಪದ್ಮನಾಭ(84) ಶನಿವಾರ(ಇಂದು) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಪತ್ನಿ, ಪುತ್ರ ಮತ್ತು ಪುತ್ರಿಯರನ್ನು ಅಗಲಿದ್ದಾರೆ.
ವಾರ್ತಾ ಇಲಾಖೆಯಲ್ಲಿ ಹಲವು ವರ್ಷಗಳ ಕಾಲ ಅಧಿಕಾರಿಯಾಗಿ ದಕ್ಷತೆಯಿಂದ ಸೇವೆ ಸಲ್ಲಿಸಿದ್ದ ಪದ್ಮನಾಭ, ಶಿವಮೊಗ್ಗ ವಾರ್ತಾಧಿಕಾರಿಯಾಗಿ ವೃತ್ತಿ ಆರಂಭಿಸಿ ನಂತರ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಸಂಪರ್ಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಜನರಿಗೆ ಹತ್ತಿರವಾಗಿದ್ದರು.
ವೀರಪ್ಪ ಮೊಯ್ಲಿ ಮತ್ತು ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಅವರ ವಾರ್ತಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಪದ್ಮನಾಭ, ಕೆಲಕಾಲ ರಾಜಭವನದ ವಾರ್ತಾಧಿಕಾರಿಯಾಗಿಯೂ ಕೆಲಸ ಮಾಡಿದ್ದರು. ಬಹುಮುಖ ಪ್ರತಿಭೆ ಹೊಂದಿದ್ದ ಅವರು, ಚಿತ್ರಕಲೆಯಲ್ಲೂ ಆಸಕ್ತಿ ಹೊಂದಿದ್ದರು. ವಿಧಾನಮಂಡಲಕ್ಕೆ 100 ವರ್ಷ ತುಂಬಿದ ಸಂದರ್ಭದಲ್ಲಿ ವಿಧಾನಮಂಡಲದ ಬಗ್ಗೆ ಸಾಕ್ಷ್ಯಚಿತ್ರವನ್ನು ನಿರ್ಮಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದರು.