'ದ.ಕ. ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿ' ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಕೋಟ ಪೂಜಾರಿ

Update: 2020-07-12 09:10 GMT

ಮಂಗಳೂರು, ಜು.12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನ ಮಾಡಲು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಲಾಕ್ ಡೌನ್ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ತಾನು, ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದು, ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಜಿಲ್ಲೆಯ ಅಲ್ಲಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಜನರಿಗೆ ತೊಂದರೆ ಆಗುವ ಯಾವುದೇ ನಿರ್ಧಾರವನ್ನು ದಿಢೀರನೇ ಜಾರಿಗೆ ತರುವುದಿಲ್ಲ. ಜನರು ಗೊಂದಲಕ್ಕೀಡಾಗಬಾರದು. ಯಾವುದೇ ತೀರ್ಮಾನವನ್ನು ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳ ಸಲಹೆ ಸೂಚನೆಯಂತೆ ಅನುಸರಿಸಲಾಗುವುದು ಎಂದು ಸಚಿವ ಕೋಟ ಅವರು ಪ್ರಕಟನೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News