ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 72 ಮಂದಿಗೆ ಕೊರೋನ ಪಾಸಿಟಿವ್

Update: 2020-07-14 14:32 GMT

ಉಡುಪಿ, ಜು.13: ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 72 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಅಲ್ಲದೇ ದಿನದಲ್ಲಿ 712 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 72 ಮಂದಿಯಲ್ಲಿ ಏಳು ಮಂದಿ ಬೆಂಗಳೂರಿನಿಂದ ಆಗಮಿಸಿದವರಿದ್ದರೆ, ಇಬ್ಬರು ಮಂಗಳೂರಿಗೆ ಭೇಟಿ ನೀಡಿ ಬಂದಿದ್ದಾರೆ. ಒಬ್ಬರು ಉಸಿರಾಟದ ತೊಂದರೆಗಾಗಿ, 14 ಮಂದಿ ಶೀತಜ್ವರದಿಂದ ಬಳಲುತಿದ್ದವರಾದರೆ ಉಳಿದಿರುವ 48 ಮಂದಿ ಈಗಾಗಲೇ ಜಿಲ್ಲೆಯಲ್ಲಿ ಪಾಸಿಟಿವ್ ಬಂದವರ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ ಎಂದು ಡಾ.ಸೂಡ ವಿವರಿಸಿದರು.

ಸೋಂಕಿತರಲ್ಲಿ ಉಡುಪಿ ತಾಲೂಕಿನ 16 ಮಂದಿ, ಕುಂದಾಪುರ ತಾಲೂಕಿನ 41 ಮಂದಿ ಹಾಗೂ ಕಾರ್ಕಳ ತಾಲೂಕಿನ 15 ಮಂದಿ ಸೇರಿದ್ದಾರೆ. 51 ಮಂದಿ ಪುರುಷರು, 19 ಮಂದಿ ಮಹಿಳೆಯರು ಹಾಗೂ 10 ವರ್ಷದೊಳಗಿನ ಪ್ರಾಯದ ತಲಾ ಒಂದು ಗಂಡು ಮತ್ತು ಹೆಣ್ಣು ಮಕ್ಕಳು ಪಾಸಿಟಿವ್ ಬಂದ ವರಲ್ಲಿ ಸೇರಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು. ಮಂಗಳವಾರ ಬಂದ 72 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 1733ಕ್ಕೇರಿದೆ.

80 ಮಂದಿ ಗುಣಮುಖ:  ಜಿಲ್ಲೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾದ 80 ಮಂದಿ ಇಂದು ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇವರಲ್ಲಿ 15 ಮಂದಿ ಡಾ.ಟಿಎಂಎ ಪೈ ಆಸ್ಪತ್ರೆಯಿಂದ, 45 ಮಂದಿ ಕುಂದಾಪುರದ ಸರಕಾರಿ ಆಸ್ಪತ್ರೆಯಿಂದ ಹಾಗೂ ಉಳಿದ 20 ಮಂದಿ ಕಾರ್ಕಳ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 1360ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 370 ಮಂದಿ ಜಿಲ್ಲೆಯಲ್ಲಿ ಇನ್ನೂ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.

115 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಮಂಗಳವಾರ ಇನ್ನೂ 115 ಮಂದಿಯ ಗಂಟಲು ದ್ರವದ ಸ್ಯಾಂಪಲ್‌ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 23 ಮಂದಿ, ಕೋವಿಡ್ ಸಂಪರ್ಕಿತರು 56 ಮಂದಿ ಇದ್ದರೆ, ಶೀತಜ್ವರದಿಂದ ಬಳಲುವ 18 ಮಂದಿ ಹಾಗೂ ದೇಶ- ವಿದೇಶಗಳ ವಿವಿಧ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಬಂದ 18 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

 ಇಂದು ಪಡೆದ ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 22,648ಕ್ಕೇರಿದೆ. ಇವುಗಳಲ್ಲಿ ಈವರೆಗೆ 19,835 ನೆಗೆಟಿವ್, 1733 ಪಾಸಿಟಿವ್ ಬಂದಿವೆ. ಈವರೆಗೆ ನಾಲ್ವರು ಮೃತಪಟ್ಟಿದ್ದಾರೆ. ಇನ್ನು ಒಟ್ಟು 1080 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ. ಇಂದು 29 ಮಂದಿಯನ್ನು ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇವರಲ್ಲಿ ಇಬ್ಬರು ಕೋವಿಡ್ ಶಂಕಿತರು, 10 ಮಂದಿ ಉಸಿರಾಟ ತೊಂದರೆಯವರು ಹಾಗೂ 17 ಮಂದಿ ಶೀತಜ್ವರದಿಂದ ಬಳಲುವವರು ಸೇರಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News