ಬೆಳಗಾವಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಮಾತ್ರ ಲಾಕ್‍ಡೌನ್: ಜಿಲ್ಲಾಧಿಕಾರಿ ಹಿರೇಮಠ

Update: 2020-07-14 17:44 GMT

ಬೆಳಗಾವಿ, ಜು. 14: ಮಾರಕ ಕೊರೋನ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲೆಯ ಗೋಕಾಕ, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳ ವ್ಯಾಪ್ತಿಯಲ್ಲಿ ಮಾತ್ರ ಜು.22ರ ಬೆಳಗಿನಜಾವ 5ಗಂಟೆಯವರೆಗೆ 7 ದಿನಗಳ ಕಾಲ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪ್ರಕಟಿಸಿದ್ದಾರೆ.

ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಲ್ಕಂಡ ಐದು ತಾಲೂಕುಗಳ ವ್ಯಾಪ್ತಿಗೆ ಮಾತ್ರ ಸೀಮಿತವಾಗಿ ಲಾಕ್‍ಡೌನ್ ಜಾರಿಯಲ್ಲಿರುತ್ತದೆ. ಈ ತಾಲೂಕುಗಳ ವ್ಯಾಪ್ತಿಯಲ್ಲಿ 2 ವಾರಗಳಂದೀಚೆಗೆ ಕೋವಿಡ್-19 ಸೋಂಕು ಹರಡುವಿಕೆಯ ಪ್ರಕರಣಗಳು ತೀವ್ರವಾಗಿ ಹೆಚ್ಚಳವಾಗುತ್ತಿದ್ದು, ಮರಣ ಪ್ರಮಾಣವು ಕೂಡಾ ಹೆಚ್ಚಳವಾಗಿರುತ್ತದೆ ಎಂದು ತಿಳಿಸಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಜ್ಞರೊಂದಿಗೆ ಈ ವಿಷಯದ ಕುರಿತು ಚರ್ಚಿಸಿ ಹಾಗೂ ವಿವರವಾಗಿ ಪರಿಶೀಲಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಹತೋಟಿಗೆ ತರಲು ಮತ್ತಷ್ಟು ಕಠಿಣ ಕ್ರಮ ತೆಗೆದುಕೊಳ್ಳುವುದು ಅವಶ್ಯವಾಗಿರುತ್ತದೆ ಎಂದು ಕಂಡುಬಂದಿರುತ್ತದೆ.

ಈ ಹಿನ್ನೆಲೆಯಲ್ಲಿ, ತಜ್ಞರ ಸಲಹೆ ಮೇರೆಗೆ ವಿಪತ್ತು ನಿರ್ವಹಣೆ ಕಾಯ್ದೆ-2005ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ನಾನು ಐದು ತಾಲೂಕುಗಳಲ್ಲಿ ಮಾತ್ರ ಲಾಕ್‍ಡೌನ್ ಘೋಷಿಸಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿದ ವಿಡಿಯೋ ಸಂವಾದದಲ್ಲಿ ಜಿಲ್ಲೆಯಲ್ಲಿನ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾಡಳಿತ ಮುಖ್ಯಸ್ಥರಾದ ಜಿಲ್ಲಾಧಿಕಾರಿಗಳು ಲಾಕ್‍ಡೌನ್ ಕುರಿತು ಸ್ಥಳೀಯ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಲು ಅನುಮತಿ ನೀಡಿದ್ದರು.

ಆ ಹಿನ್ನೆಲೆಯಲ್ಲಿ ಐದು ತಾಲೂಕುಗಳಲ್ಲಿ ಲಾಕ್‍ಡೌನ್ ಘೋಷಿಸಲಾಗಿದ್ದು, ಉಳಿದಂತೆ ರಾಜ್ಯ ಸರಕಾರದ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಬಗ್ಗೆ ಕಂಟೈನ್‍ಮೆಂಟ್ ವಲಯಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ನಿಷೇಧಿತ ಕಾರ್ಯ ಚಟುವಟಿಕೆಗಳನ್ನು ಕ್ರಮೇಣವಾಗಿ ಪುನರ್ ಪ್ರಾರಂಭಿಸಲು ಅನ್‍ಲಾಕ್-2ರ ಮಾರ್ಗಸೂಚಿಗಳನ್ನು ಹಾಗೂ ಕಂಟೈನ್‍ಮೆಂಟ್ ವಲಯಗಳ ಪ್ರದೇಶಗಳಲ್ಲಿ ಲಾಕ್‍ಡೌನ್ ಅನ್ನು ವಿಸ್ತರಿಸಿ ಆದೇಶಿಸಿದೆ ಎಂದರು.

ಲಾಕ್‍ಡೌನ್‍ನ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಸಂಬಂಧಪಟ್ಟ ಉಪವಿಭಾಗಾಧಿಕಾರಿಗಳು/ತಹಶೀಲ್ದಾರರು/ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯತ್/ಪೌರಾಯುಕ್ತರು/ಮುಖ್ಯಾಧಿಕಾರಿಗಳು ಹಾಗೂ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಎಂ.ಜಿ.ಹಿರೇಮಠ ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News