ಪೌರ ಕಾರ್ಮಿಕರಿಗೆ 10 ಸಾವಿರ ರೂ.ರಿಸ್ಕ್ ಭತ್ತೆ: ಸಚಿವ ಡಾ.ಕೆ.ಸುಧಾಕರ್

Update: 2020-07-14 18:43 GMT

ಬೆಂಗಳೂರು, ಜು.14: ಕೋವಿಡ್-19 ನಿಯಂತ್ರಿಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ನೆರವು ನೀಡಲು ಮುಂದಾಗಿರುವ ರಾಜ್ಯ ಸರಕಾರವು, ಅವರಿಗೆ ತಲಾ 10 ಸಾವಿರ ರೂ.ಗಳ ರಿಸ್ಕ್ ಭತ್ತೆ ನೀಡಲು ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳಲ್ಲಿರುವ ಲಭ್ಯವಿರುವ ಹಾಸಿಗೆಗಳ ಮಾಹಿತಿ ಸಕಾಲಕ್ಕೆ ಪಡೆಯುವ ನಿಟ್ಟಿನಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ರಿಯಲ್ ಟೈಮ್ ಮಾಹಿತಿಗೆ ಡಿಜಿಟಲ್ ಡ್ಯಾಶ್ ಬೋರ್ಡ್ ಅಳವಡಿಸಲು ತೀರ್ಮಾನಿಸಲಾಗಿದೆ ಎಂದರು.

ಅಪೋಲೋ ಮತ್ತು ವಿಕ್ರಂ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ 49 ಗಂಟೆಗಳ ಕಾಲ ಹೊರ ರೋಗಿಗಳ ವಿಭಾಗ(ಓಪಿಡಿ) ಬಂದ್ ಮಾಡಲಾಗಿದೆ. ರಾಜ್ಯ ಸರಕಾರ ಕೋವಿಡ್ ಚಿಕಿತ್ಸೆಗಾಗಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚು ವಸೂಲಿ ಮಾಡುವಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಅರೆ ವೈದ್ಯಕೀಯ ಸಿಬ್ಬಂದಿಯ ಕೊರತೆ ನೀಗಿಸಲು ಸರಕಾರ ಅಗತ್ಯ ಕ್ರಮ ಕೈಗೊಂಡಿದೆ. ಅಲ್ಲದೆ, ಮುಂದಿನ ಎರಡು ವಾರಗಳಲ್ಲಿ ರಾಜ್ಯದಲ್ಲಿ ಇನ್ನೂ 25 ಕೋವಿಡ್ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಸುಧಾಕರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News