ವಿಕ್ಟೋರಿಯಾ ಆಸ್ಪತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿ: ಕೋವಿಡ್ ಸೋಂಕಿತರು, ವೈದ್ಯರೊಂದಿಗೆ ಸಮಾಲೋಚನೆ

Update: 2020-07-15 12:35 GMT

ಬೆಂಗಳೂರು, ಜು.15: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ, ಕೋವಿಡ್ ಸೋಂಕಿತರು, ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿದರು. ಹಾಗೂ ನಿಮ್ಮೆಲ್ಲರೊಂದಿಗೆ ನಾವು ಸದಾ ಇರುತ್ತೇವೆಂದು ಆತ್ಮವಿಶ್ವಾಸ ಮೂಡಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ವಿರುದ್ಧದ ಹೋರಾಟದಲ್ಲಿ ವೈದ್ಯರು, ಆಸ್ಪತ್ರೆ ಸಿಬ್ಬಂದಿ, ನರ್ಸ್‍ಗಳು, ಪೊಲೀಸರು ಸೇರಿದಂತೆ ಎಲ್ಲ ವಾರಿಯರ್ಸ್ ಗಳು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ತಮ್ಮ ಜೀವದ ಹಂಗು ತೊರೆದು ಹೋರಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಧೈರ್ಯ, ಆತ್ಮವಿಶ್ವಾಸ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವೆಂದು ತಿಳಿಸಿದರು.

ಇಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೋಂಕಿತರ ಜತೆ ನಾನು ಮಾತನಾಡಿದ್ದು, ಇಲ್ಲಿನ  ಚಿಕಿತ್ಸೆ ಹಾಗೂ ಇನ್ನಿತರೆ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗರ್ಭಿಣಿ ಮಹಿಳೆಯರು ಸೇರಿದಂತೆ 4 ವರ್ಷದ ಮಗುವಿನಿಂದ ಹಿಡಿದು 99 ವರ್ಷದ ವೃದ್ಧರವರೆಗೂ ಅನೇಕ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಮರಳಿರುವ ದಾಖಲೆಗಳನ್ನು ಗಮನಿಸಿದ್ದೇನೆಂದು ಅವರು ಹೇಳಿದರು.

ಈ ಆಸ್ಪತ್ರೆಯ ಮತ್ತೊಂದು ವಿಶೇಷ ಏನೆಂದರೆ, ಇಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಹೋದವರು ಮತ್ತೆ ಇಲ್ಲಿಗೆ ಬಂದು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಮುಂದಾಗಿದ್ದಾರೆ. ಹೀಗಾಗಿ ಇಂತಹ ವಾತಾವರಣವನ್ನು ಮತ್ತಷ್ಟು ಉತ್ತಮಪಡಿಸಲು ಸೋಂಕಿತರು, ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ನಾವೆಲ್ಲರೂ ನೈತಿಕ ಬೆಂಬಲ ನೀಡಬೇಕಿದೆ ಎಂದು ಅವರು ಹೇಳಿದರು.

ಆರೋಗ್ಯ ಸಚಿವ ಶ್ರೀರಾಮುಲು ಆಸ್ಪತ್ರೆಗಳಿಗೆ ಭೇಟಿ ನೀಡಿ ಸೋಂಕಿತರು ಮತ್ತು ಚಿಕಿತ್ಸೆ ನೀಡುತ್ತಿರುವವರಿಗೆ ಆತ್ಮವಿಶ್ವಾಸ ತುಂಬಬೇಕು. ಚಿಕಿತ್ಸಾ ವ್ಯವಸ್ಥೆಯಲ್ಲಿ ಸಣ್ಣಪುಟ್ಟ ದೋಷಗಳಿದ್ದರೆ ಅದನ್ನು ಸರಿ ಪಡಿಸುವುದು ಸರಕಾರದ ಕರ್ತವ್ಯವೆಂದು ಅವರು ಒತ್ತಾಯಿಸಿದರು.

ಆಸ್ಪತ್ರೆಗೆ ಭೇಟಿ ನೀಡಿರುವ ಸಂದರ್ಭದಲ್ಲಿ ಕೋವಿಡ್ ಸಲಕರಣೆಗಳ ಖರೀದಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಮಾತನಾಡುವುದು ಸರಿಯಲ್ಲ. ಅದನ್ನು ಬೇರೆ ಸಂದರ್ಭದಲ್ಲಿ ಬೇರೆ ವೇದಿಕೆಯಲ್ಲಿ ಪ್ರಸ್ತಾಪ ಮಾಡುತ್ತೇನೆ. ಇಲ್ಲಿಗೆ ಬಂದಿರುವುದು ಸೋಂಕಿತರು, ವೈದ್ಯರು ಮತ್ತು ಸಿಬ್ಬಂದಿಗಳಿಗೆ ಆತ್ಮವಿಶ್ವಾಸ ತುಂಬಲು ಮಾತ್ರ. ಬೇರೆ ವಿಚಾರಗಳ ಬಗ್ಗೆ ಇಲ್ಲಿ ಮಾತನಾಡುವುದು ಸರಿಯಲ್ಲ. ಚಿಕಿತ್ಸಾ ಸಮಯದಲ್ಲಿ ಸೋಂಕಿತರ ಮಾನಸಿಕ ಆರೋಗ್ಯವು ಬಹಳ ಮುಖ್ಯವಾಗಿರುತ್ತದೆ. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಫೋನ್ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಸೋಂಕಿತರು ತಮ್ಮ ಕುಟುಂಬದವರ ಜತೆ ಮಾತನಾಡಬಹುದಾಗಿದೆ. ಇದೇ ಮಾದರಿಯಲ್ಲಿ ಎಲ್ಲ ಆಸ್ಪತ್ರೆಗಳಲ್ಲೂ ಫೋನ್ ವ್ಯವಸ್ಥೆ ಮಾಡಬೇಕು.

-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News