ಬೆಂಗಳೂರು ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಲಾಕ್‍ಡೌನ್‍: ವ್ಯಾಪಾರ, ವಹಿವಾಟು ಸೇರಿ ಎಲ್ಲ ಚಟುವಟಿಕೆಗಳು ಸ್ತಬ್ಧ

Update: 2020-07-15 14:18 GMT

ಬೆಂಗಳೂರು, ಜು. 15: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಮಾರಕ ಕೊರೋನ ವೈರಸ್ ಸೋಂಕು ನಿಯಂತ್ರಣದ ದೃಷ್ಟಿಯಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಧಾರವಾಡ, ಕಲಬುರಗಿ ಸೇರಿದಂತೆ ಐದಾರು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿಯಿಂದಲೇ ಹೇರಿರುವ ಲಾಕ್‍ಡೌನ್‍ಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಹಗಲು-ರಾತ್ರಿಗಳ ಪರಿವೆ ಮರೆತು ಸದಾ ಜನಜಂಗುಳಿಯಿಂದ ಗಿಜುಗುಡುತ್ತಿದ್ದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ತುರ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿದರೆ ವ್ಯಾಪಾರ, ವಹಿವಾಟು ಸೇರಿದಂತೆ ಇತರೆಲ್ಲ ಚಟುವಟಿಕೆಗಳು ಸಂಪೂರ್ಣ ಬಂದ್ ಆಗಿದ್ದು, ಇಡೀ ನಗರವೇ ಅಕ್ಷರಶಃ ಮೌನಕ್ಕೆ ಶರಣಾದಂತೆ ಇತ್ತು. ಜೊತೆಗೆ ಧಾರವಾಡ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಲಾಕ್‍ಡೌನ್ ಯಶಸ್ವಿಯಾಗಿದೆ.

ಬೀದರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದ ಲಾಕ್‍ಡೌನ್ ಜಾರಿಗೆ ಬರಲಿದೆ. ಉಡುಪಿ, ಕೊಡಗು, ಬೆಳಗಾವಿ, ಹಾಸನ ಹಾಗೂ ರಾಯಚೂರು ಜಿಲ್ಲೆಗಳ ಜಿಲ್ಲಾ ಕೇಂದ್ರಗಳು, ಪ್ರಮುಖ ನಗರ ಹಾಗೂ ಪಟ್ಟಣಗಳಲ್ಲಿಯೂ ಸೋಂಕು ನಿಯಂತ್ರಣ ದೃಷ್ಟಿಯಿಂದ ಸಾರ್ವಜನಿಕರೆ ಸ್ವಯಂ ನಿರ್ಬಂಧ ಹೇರಿಕೊಳ್ಳುವ ಮೂಲಕ ಲಾಕ್‍ಡೌನ್‍ಗೆ ಬೆಂಬಲ ನೀಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜನಜೀವನ ಸಂಪೂರ್ಣ ಸ್ತಬ್ಧವಾಗಿತ್ತು.

ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಬಸ್, ಆಟೋರಿಕ್ಷಾ, ಟ್ಯಾಕ್ಸಿ ಸೇರಿದಂತೆ ಯಾವುದೇ ವಾಹನ ಸಂಚಾರ ಇರಲಿಲ್ಲ. ತುರ್ತು ಅಗತ್ಯದ ಆಂಬ್ಯುಲೆನ್ಸ್, ಹಾಲು, ದಿನಸಿ ವಾಹನಗಳನ್ನು ಹೊರತುಪಡಿಸಿದರೆ, ಅತ್ಯಂತ ವಿರಳ ಸಂಖ್ಯೆಯಲ್ಲಿ ಅಲ್ಲಲ್ಲಿ ಆಟೋರಿಕ್ಷಾ, ದ್ವಿಚಕ್ರ ವಾಹನ ಸಂಚಾರವಿತ್ತು. ಕೆಲ ಕಡೆಗಳಲ್ಲಿ ದ್ವಿಚಕ್ರ ವಾಹನ ಮತ್ತು ಕಾರುಗಳಲ್ಲಿ ರಸ್ತೆಗಿಳಿದ ಸವಾರರು ಮತ್ತು ಚಾಲಕರನ್ನು ಪೊಲೀಸರು ಪರಿಶೀಲನೆ ನಡೆಸಿ, ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು ನಗರದಲ್ಲಿನ ಫ್ಲೈಓವರ್ ಮತ್ತು ಅಂಡರ್ ಪಾಸ್‍ಗಳು ಸೇರಿದಂತೆ ಬಹುತೇಕ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕುವ ಮೂಲಕ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಿದ್ದರು. ಸಿದ್ಧ ಉಡುಪು ಕಾರ್ಖಾನೆಗಳು, ಕೆಲ ಕೈಗಾರಿಕೆಗಳು ಮತ್ತು ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಲಾಕ್‍ಡೌನ್ ಮಾರ್ಗಸೂಚಿಯಿಂದ ವಿನಾಯಿತಿ ನೀಡಿದ್ದರಿಂದ ಆ ವಲಯದ ಕಾರ್ಮಿಕರು ಎಂದಿನಂತೆ ಕಾರ್ಯನಿರ್ವಹಿಸಿದರು.

ಹಾಲು, ಔಷಧ, ಹಣ್ಣು-ತರಕಾರಿ, ದಿನ ವಸ್ತುಗಳ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ಗಂಟೆಯಿಂದ 12ಗಂಟೆಯ ವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಅನಂತರ ಪೊಲೀಸರು ಯಾವುದೇ ಮುಲಾಜಿಲ್ಲದೆ ದಿನಸಿ ಅಂಗಡಿಗಳನ್ನು ಮುಚ್ಚುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಪೊಲೀಸರು ಕ್ರಮ ವಹಿಸಿದ್ದಾರೆ.

ಲಾಕ್‍ಡೌನ್ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಗಡಿಗಳು ಮತ್ತು ಕೆಲ ಅಂತರ ಜಿಲ್ಲಾ ಗಡಿಗಳು ಬಂದ್ ಆಗಿದ್ದು, ಒಳ ಬರುವ ಮತ್ತು ಹೊರ ಹೋಗುವ ವಾಹನಗಳ ನಿರ್ಬಂಧಿಸಲಾಗಿದೆ. ಹೀಗಾಗಿ ಜನರು ಮನೆಗಳಲ್ಲಿ ಬಂಧಿಯಾಗಲಿದ್ದಾರೆ. ವ್ಯಾಪಾರ, ವಹಿವಾಟು ಸೇರಿ ಇನ್ನಿತರ ಚಟುವಟಿಕೆಗಳು ಸ್ತಬ್ಧವಾಗಲಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News