ಉಡುಪಿ ಜಿಲ್ಲೆಯಲ್ಲಿ ಬುಧವಾರ 53 ಮಂದಿಗೆ ಕೊರೋನ ಪಾಸಿಟಿವ್

Update: 2020-07-15 14:57 GMT
ಸಾಂದರ್ಭಿಕ ಚಿತ್ರ

ಉಡುಪಿ, ಜು.15: ಜಿಲ್ಲೆಯಲ್ಲಿ ಬುಧವಾರ ಒಟ್ಟು 53 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಉಳಿದಂತೆ 832 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಕೊರೋನ ಸೋಂಕು ಪತ್ತೆಯಾದ 53 ಮಂದಿಯಲ್ಲಿ ತಲಾ ಇಬ್ಬರು ಮುಂಬಯಿ ಮತ್ತು ಬೆಂಗಳೂರಿನಿಂದ ಆಗಮಿಸಿದವರಾಗಿದ್ದರೆ, 16 ಮಂದಿ ಶೀತಜ್ವರದಿಂದ ಬಳಲುತಿದ್ದವರು. ಉಳಿದಿರುವ 33 ಮಂದಿ ಈಗಾಗಲೇ ಜಿಲ್ಲೆಯಲ್ಲಿ ಪಾಸಿಟಿವ್ ಬಂದವರ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ ಎಂದು ಡಾ.ಸೂಡ ವಿವರಿಸಿದರು.

ಸೋಂಕಿತರಲ್ಲಿ ಉಡುಪಿ ತಾಲೂಕಿನ 18 ಮಂದಿ, ಕುಂದಾಪುರ ತಾಲೂಕಿನ 29 ಮಂದಿ ಹಾಗೂ ಕಾರ್ಕಳ ತಾಲೂಕಿನ ಆರು ಮಂದಿ ಸೇರಿದ್ದಾರೆ. 24 ಪುರುಷರು, 22 ಮಂದಿ ಮಹಿಳೆಯರು ಹಾಗೂ 10 ವರ್ಷದೊಳಗಿನ ಪ್ರಾಯದ ನಾಲ್ವರು ಬಾಲಕರು ಹಾಗೂ ಮೂವರು ಬಾಲಕಿಯರು ಸೇರಿದಂತೆ ಒಟ್ಟು ಏಳು ಮಂದಿ ಮಕ್ಕಳು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ ಎಂದ ಡಿಎಚ್‌ಓ, ಬುಧವಾರ ಬಂದ 53 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 1786ಕ್ಕೇರಿದೆ.

22 ಮಂದಿ ಗುಣಮುಖ:  ಜಿಲ್ಲೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾದ 22 ಮಂದಿ ಇಂದು ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 1382ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 401 ಮಂದಿ ಜಿಲ್ಲೆಯಲ್ಲಿ ಇನ್ನೂ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.

460 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಬುಧವಾರ ಇನ್ನೂ 460 ಮಂದಿಯ ಗಂಟಲುದ್ರವದ ಸ್ಯಾಂಪಲ್‌ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 69 ಮಂದಿ, ಕೋವಿಡ್ ಸಂಪರ್ಕಿತರು 186 ಮಂದಿ ಇದ್ದರೆ, ಉಸಿರಾಟ ತೊಂದರೆಯ ಆರು ಮಂದಿ, ಶೀತಜ್ವರದಿಂದ ಬಳಲುವ 111 ಮಂದಿ ಹಾಗೂ ದೇಶ-ವಿದೇಶಗಳ ವಿವಿಧ ಕೋವಿಡ್ ಹಾಟ್‌ಸ್ಪಾಟ್ ಗಳಿಂದ ಬಂದ 88 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

ಇಂದು ಪಡೆದ ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 23,108ಕ್ಕೇರಿದೆ. ಇವುಗಳಲ್ಲಿ ಈವರೆಗೆ 20,667 ನೆಗೆಟಿವ್, 1786 ಪಾಸಿಟಿವ್ ಬಂದಿವೆ. ಈವರೆಗೆ ಜಿಲ್ಲೆಯಲ್ಲಿ ಐವರು ಮೃತಪಟ್ಟಿದ್ದಾರೆ. ಇನ್ನು ಒಟ್ಟು 655 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ. ಇಂದು 21 ಮಂದಿಯನ್ನು ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇವರಲ್ಲಿ ಇಬ್ಬರು ಕೋವಿಡ್ ಶಂಕಿತರು, 7 ಮಂದಿ ಉಸಿರಾಟ ತೊಂದರೆ ಯವರು ಹಾಗೂ 12 ಮಂದಿ ಶೀತಜ್ವರದಿಂದ ಬಳಲುವವರು ಸೇರಿದ್ದಾರೆ ಎಂದರು.

ಜಿಲ್ಲೆಯ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್‌ಗಳಿಂದ ಇಂದು 23 ಮಂದಿ ಬಿಡುಗಡೆಗೊಂಡಿದ್ದು, 160 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಇಂದು ಕೊರೋನ ಸೋಂಕಿನ ಗುಣಲಕ್ಷಣದ 207 ಮಂದಿ ಸೇರಿದಂತೆ ಒಟ್ಟು 6641 ಮಂದಿಯನ್ನು ಕೊರೋನ ತಪಾಸಣೆಗಾಗಿ ನೊಂದಾಯಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗ 1766 ಮಂದಿ ಹೋಮ್ ಕ್ವಾರಂಟೈನ್ ನಲಿ್ಲದ್ದಾರೆ ಎಂದು ಡಾ.ಸೂಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News