ರಾಜ್ಯದಲ್ಲಿನ್ನು ಬ್ರಾಹ್ಮಣರಿಗೆ ಸಿಗಲಿದೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ

Update: 2020-07-15 17:14 GMT

ಬೆಂಗಳೂರು, ಜು. 15: ರಾಜ್ಯದಲ್ಲಿರುವ ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ವಿತರಿಸಲು ತಹಶೀಲ್ದಾರರಿಗೆ ನಿರ್ದೇಶನ ನೀಡಬೇಕು ಎಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಎಂ.ಎಲ್.ವರಲಕ್ಷ್ಮಿ ಆದೇಶ ಹೊರಡಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮಾಜದವರಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇನ್ನಿತರ ಸೌಲಭ್ಯಗಳನ್ನೊಳಗೊಂಡಂತೆ ಯೋಜನೆಗಳನ್ನು ಜಾರಿಗೆ ತರುವ ಉದ್ದೇಶಕ್ಕಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಗಿದೆ. ಈ ಮಧ್ಯೆ ಕೇಂದ್ರ ಸರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ನಾಗರಿಕ ಹುದ್ದೆಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಗರಿಷ್ಟ ಶೇ.10ರಷ್ಟು ಮೀಸಲಾತಿ ಕಲ್ಪಿಸಿ ಆದೇಶ ಹೊರಡಿಸಿದೆ.

ಹೀಗಾಗಿ ಬ್ರಾಹ್ಮಣ ಸಮಾಜದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಲು ಕೆಲ ಅರ್ಹತಾ ಮಾನದಂಡಗಳನ್ನು ನಿಗದಿಪಡಿಸಿಕೊಂಡು ದೃಢೀಕರಣ ಪತ್ರಗಳನ್ನು ವಿತರಿಸಬಹುದಾಗಿದೆ. ರಾಜ್ಯದ ಬ್ರಾಹ್ಮಣ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸಬೇಕು ಎಂದು ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.

'ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಸೂಕ್ತ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಅನುಮತಿ ನೀಡಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು'

-ಗೋವಿಂದ ಕಾರಜೋಳ, ಉಪಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News