ಲಾಕ್‍ಡೌನ್‍ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: ಗೃಹ ಸಚಿವ ಬೊಮ್ಮಾಯಿ

Update: 2020-07-15 18:13 GMT

ಬೆಂಗಳೂರು, ಜು. 15: ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 12 ಗಂಟೆಯ ವರೆಗೆ ಮಾತ್ರ ಅವಕಾಶವಿರುತ್ತದೆ. ಆ ಬಳಿಕ ಯಾವುದೇ ಕಾರಣಕ್ಕೂ ಅನಗತ್ಯವಾಗಿ ಸಂಚರಿಸಲು ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾರಕ ಕೊರೋನ ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೇರಿರುವ ಲಾಕ್‍ಡೌನ್‍ಗೆ ಸಾರ್ವಜನಿಕರು ಸ್ವಪ್ರೇರಣೆಯಿಂದ ಬೆಂಬಲನೀಡುವ ಮೂಲಕ ಸಹಕರಿಸಬೇಕು. ಯಾವುದೇ ಸಂದರ್ಭದಲ್ಲಿ ಬಲಪ್ರಯೋಗ ಬಳಸುವ ಅನಿವಾರ್ಯತೆ ಸೃಷ್ಟಿಯಾಗಬಾರದು ಎಂದು ಹೇಳಿದರು.

ಕೊರೋನ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜನತೆ ಸರಕಾರದ ಮಾರ್ಗಸೂಚಿ ಪಾಲಿಸುವ ಮೂಲಕ ಸಹಕಾರ ನೀಡಬೇಕು. ಬೆಂಗಳೂರು ನಗರದಲ್ಲಿ ದಿನಸಿ ಸಹಿತ ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 12 ಗಂಟೆಯ ವರೆಗೆ ಮಾತ್ರ ಅವಕಾಶವಿರುತ್ತದೆ. ಯಾವುದೇ ಕಾರಣಕ್ಕೂ ನಿಯಮ ಉಲ್ಲಂಘನೆ ಸಹಿಸುವುದಿಲ್ಲ ಎಂದು ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

ಜನರ ಸಹಕಾರವಿಲ್ಲದೆ ಲಾಕ್‍ಡೌನ್ ಯಶಸ್ವಿಯಾಗುವುದಿಲ್ಲ. ಸೋಂಕು ನಿಯಂತ್ರಣಕ್ಕೆ ಜನರು ಕೈಜೋಡಿಸಬೇಕು. ವಾಹನ ಸಂಚಾರ ನಿರ್ಬಂಧಿಸುವ ದೃಷ್ಟಿಯಿಂದ ನಗರದಲ್ಲಿ ಎಲ್ಲ ಕಡೆಗಳಲ್ಲಿ ಬ್ಯಾರಿಕೇಡ್‍ಗಳನ್ನು ಹಾಕಲಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್‍ಡೌನ್ ಕಟ್ಟುನಿಟ್ಟಿನ ಪಾಲನೆಗೆ ಸರಕಾರ ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News