ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ವರ್ಗಾವಣೆ

Update: 2020-07-18 13:05 GMT
ಅನಿಲ್ ಕುಮಾರ್

ಬೆಂಗಳೂರು, ಜು.18: ಕೋವಿಡ್19 ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 

ಕೋವಿಡ್ ಟಾಸ್ಕ್ ಪೋರ್ಸ್ ಮುಖ್ಯಸ್ಥ ಹಾಗೂ ಆಯುಕ್ತರಾಗಿರುವ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಹಾಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಮಂಜುನಾಥ್ ಪ್ರಸಾದ್ ಅವರನ್ನು ನೂತನ ಬಿಬಿಎಂಪಿ ಆಯುಕ್ತರಾಗಿ ನೇಮಕ ಮಾಡಿದೆ. 

ನಗರದಲ್ಲಿ ಕೊರೋನ ಸೋಂಕಿತರ ಪ್ರಕರಣ ದಿನೇ ದಿನೇ ಹೆಚ್ಚುತ್ತಲೆ ಇದ್ದು, ಕೊರೋನ ನಿಯಂತ್ರಣಕ್ಕೆ ತರುವಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ. ಇದರಿಂದ ರಾಜ್ಯ ಸರಕಾರ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡಿದೆ ಎನ್ನಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ನಗರದಲ್ಲಿ ಕೊರೋನ ಸೋಂಕಿಗೆ ಕಡಿವಾಣ ಹಾಕುವಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂಬ ಆರೋಪ ವ್ಯಕ್ತವಾಗುತ್ತಿದೆ. ಅಲ್ಲದೆ, ಕಂಟೈನ್ಮೆಂಟ್ ಪ್ರದೇಶದಲ್ಲಿ ಆಹಾರ ವಿತರಣೆ ಮಾಡುವ ವಿಚಾರದಲ್ಲಿ ಬಿಬಿಎಂಪಿ ಎಡವಿದೆ ಎಂದು ಹೈಕೋರ್ಟ್ ಸಹ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಬಿ.ಎಚ್ ಅನಿಲ್ ಕುಮಾರ್ ಅವರನ್ನು ಸಾರ್ವಜನಿಕ ಉದ್ದಿಮೆ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News