ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ: ಶಿವಮೊಗ್ಗದಲ್ಲಿ ಮುಂದುವರಿದ ಕಿಡಿಗೇಡಿಗಳ ದುಷ್ಕೃತ್ಯ

Update: 2020-07-23 08:19 GMT

ಶಿವಮೊಗ್ಗ, ಜು.23: ನಗರದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮತ್ತೆ ಮುಂದುವರಿದಿದ್ದು, ಗುರುವಾರ ಕೂಡ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ ಇಟ್ಟು ವಿಕೃತಿ ಮೆರೆದಿದ್ದಾರೆ.

ಗಾಂಧಿ ಬಜಾರ್ ಪ್ರದೇಶದ ಜ್ಯುವೆಲ್ಲರಿ ಅಂಗಡಿ ಮುಂದೆ ನಿಲ್ಲಿಸಲಾಗಿದ್ದ ಎರಡು ಮೊಪೆಡ್ ಬೈಕ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಎರಡು ಬೈಕ್ ಗಳೂ ಸುಟ್ಟು ಕರಕಲಾಗಿವೆ.

ಕಳೆದ ವಾರವಷ್ಟೇ ಮನೆಯ ಮುಂದೆ ನಿಲ್ಲಿಸಲಾಗಿದ್ದ 17 ದ್ವಿಚಕ್ರ ವಾಹನಗಳ ಬ್ಯಾಟರಿಗಳ ಕಳ್ಳತನ, ಸೀಗೆಹಟ್ಟಿ ಬಡಾವಣೆಯಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣ ಮಾಸುವ ಬೆನ್ನಲ್ಲೇ ಇದೀಗ ಗುರುವಾರ ಬೆಳಗಿನ ಜಾವ ಈ ಘಟನೆ ನಡೆದಿದೆ.

ಈ ಘಟನೆ ಕುರಿತು ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News