ಸರಕಾರದ ಆದೇಶ ಪಾಲಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ: ಸಿಎಂ ಬಿಎಸ್‌ವೈ

Update: 2020-07-24 16:12 GMT

ಬೆಂಗಳೂರು, ಜು. 24: ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಂಬಂಧ ರಾಜ್ಯ ಸರಕಾರದ ಆದೇಶ ಪಾಲಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಶುಕ್ರವಾರ ಇಲ್ಲಿನ ಸಿಎಂ ನಿವಾಸ ಕೃಷ್ಣಾದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ವಲಯದ ಉಸ್ತುವಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಖಾಸಗಿ ಆಸ್ಪತ್ರೆಗಳ ಮಾಲಕರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ನಾಲ್ಕು ಸಭೆ ನಡೆಸಿದ್ದು, ಈವರೆಗೂ ಸರಕಾರ ಸೂಚಿಸಿದಷ್ಟು ಹಾಸಿಗೆಗಳನ್ನು ಏಕೆ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.

ಇನ್ನೂ ಸಹಿಸಲು ಸಾಧ್ಯವಿಲ್ಲ. ಸರಕಾರದ ಆದೇಶ ಪಾಲಿಸದಿದ್ದರೆ ಅವರು ಎಷ್ಟೇ ದೊಡ್ಡವರಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಯಡಿಯೂರಪ್ಪ, ಕೊರೋನ ಸೋಂಕಿತರಿಗೆ ಹಾಸಿಗೆ ನೀಡಿದ ಆಸ್ಪತ್ರೆಗಳಿಗೆ ನೀರು ಮತ್ತು ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕೂಡಲೇ ಕಡಿತಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಕೋವಿಡ್ ಕೇರ್ ಸೆಂಟರ್ ಗೆ ದಾಖಲು: ನಾಳೆಯಿಂದ 'ಎ ಸಿಂಪ್ಟಮ್ಸ್' ಸೋಂಕಿತರನ್ನು ತುಮಕೂರು ರಸ್ತೆಯಲ್ಲಿ ನೂತನವಾಗಿ ಬಿಐಇಎಸ್‍ನಲ್ಲಿ ನಿರ್ಮಾಣವಾಗಿರುವ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸುವ ಮೂಲಕ ನಗರದಲ್ಲಿ ಕೋವಿಡ್ ಮತ್ತು ಕೋವಿಡ್ ಸೋಂಕು ರಹಿತ ರೋಗಿಗಳ ಚಿಕಿತ್ಸೆಗೆ ಸೂಕ್ತ ಹಾಸಿಗೆ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.

ಇದರಿಂದ ನಗರದಲ್ಲಿರುವ ಆಸ್ಪತ್ರೆಗಳ ಮೇಲೆ ಒತ್ತಡ ಕಡಿಮೆಯಾಗುವುದರ ಜತೆಗೆ ಕೋವಿಡ್ ಸೋಂಕು ರಹಿತರಿಗೆ ಹಾಸಿಗೆಗಳನ್ನು ಆಸ್ಪತ್ರೆಗಳಲ್ಲಿ ಮೀಸಲಿಡಬೇಕು. ಯಾವುದೇ ಕಾರಣಕ್ಕೂ ಯಾವುದೇ ರೋಗಿಗಳಿಗೆ ಹಾಸಿಗೆ ನಿರಾಕರಣೆ ಸರಿಯಲ್ಲ. ತಮ್ಮ ವಲಯಗಳಲ್ಲಿ ಇನ್ನೂ ಹತ್ತು ದಿನಗಳಲ್ಲಿ ಸೋಂಕಿತರ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.

ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳು ಮೈಚಳಿ ಬಿಟ್ಟು ಕೊರೋನ ಸೋಂಕು ನಿಯಂತ್ರಣಕ್ಕೆ ಕೆಲಸ ಮಾಡಬೇಕು. ಸ್ಥಳೀಯ ಜನಪ್ರತಿನಿಧಿಗಳು, ಪಾಲಿಕೆ ಸದಸ್ಯರು ಸೇರಿದಂತೆ ಎಲ್ಲರ ನೆರವು ಪಡೆದುಕೊಳ್ಳಿ ಎಂದ ಯಡಿಯೂರಪ್ಪ, ಸೋಂಕು ನಿಯಂತ್ರಣ ಮತ್ತು ಸೋಂಕಿತರ ಸಾವಿನ ಸಂಖ್ಯೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಫಲಿತಾಂಶ ನೀಡಬೇಕು ಎಂದು ಕಟ್ಟಪ್ಪಣೆ ಮಾಡಿದರು.

ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಶಾಸಕರಾದ ಉದಯ ಗರುಡಾಚಾರ್, ರವಿ ಸುಬ್ರಮಣ್ಯ, ಸಂಸದ ತೇಜಸ್ವಿ ಸೂರ್ಯ, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News