ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಆಗ್ರಹ: ಜು.29ರಂದು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ

Update: 2020-07-24 17:34 GMT

ಬೆಂಗಳೂರು, ಜು.24: ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ನಿರ್ಲಕ್ಷ್ಯ ಧೋರಣೆ ತಾಳಿರುವ ಸರಕಾರದ ಕ್ರಮವನ್ನು ಖಂಡಿಸಿ ಜು.29ರಂದು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದೆಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷ ಸೋಮಶೇಖರ ಯಾದಗಿರಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12ಸಾವಿರ ರೂ.ಗೌರವ ಧನ, ಕೋವಿಡ್-19 ಹಿನ್ನೆಲೆ ಪಿಪಿಇ ಕಿಟ್ ಸೇರಿ ಸುರಕ್ಷಿತ ಸಾಮಗ್ರಿಗಳಿಗಾಗಿ ಒತ್ತಾಯಿಸಿ ಕಳೆದ 15 ದಿನಗಳಿಂದ ತಾಲೂಕು, ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡಲಾಗುತ್ತಿದೆ. ಆದರೂ ಸರಕಾರ ನಮ್ಮ ಬೇಡಿಕೆಗಳ ಬಗ್ಗೆ ಕನಿಷ್ಠ ಕಾಳಜಿ ತೋರಿಸುತ್ತಿಲ್ಲ. ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಈಡೇರಿಸುವಂತಹವು. ಹೀಗಾಗಿ ಕೂಡಲೇ ರಾಜ್ಯ ಸರಕಾರ ಈ ಬಗ್ಗೆ ಕಾರ್ಯೋನ್ಮುಖವಾಗಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಸರಕಾರವನ್ನು ಒತ್ತಾಯಿಸಿದ್ದಾರೆ. ಆದರೆ, ರಾಜ್ಯ ಸರಕಾರ ಮಾತ್ರ ಯಾರ ಮನವಿಗೂ, ಒತ್ತಾಯಕ್ಕೂ ಮಣಿಯದ ರೀತಿಯಲ್ಲಿ ವರ್ತಿಸುತ್ತಿದೆ.

ಕೋವಿಡ್ ಸಂಕಷ್ಟದ ಸಮಯದಲ್ಲೂ ಆಶಾ ಕಾರ್ಯಕರ್ತೆಯರು ತಮ್ಮ ಜೀವವನ್ನು ಲೆಕ್ಕಿಸದೆ ಸರಕಾರದ ಕಾರ್ಯಕ್ರಮಗಳನ್ನು ಜನತೆಗೆ ಮುಟ್ಟಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಸರಕಾರ ಮಾತ್ರ ಆಶಾ ಕಾರ್ಯಕರ್ತರ ಬೇಡಿಕೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದೆ. ಹೀಗಾಗಿ ಜು.29ರಂದು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಹಾಗೆಯೇ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ ಎಂದು ಪ್ರಕಟನೆಯ ಮೂಲಕ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News