ಜು.27ರಂದು ರಾಜ್ಯ ಸರಕಾರದ ಒಂದು ವರ್ಷದ ಪ್ರಧಾನ ಸಮಾರಂಭ

Update: 2020-07-25 16:24 GMT

ಬಾಗಲಕೋಟೆ, ಜು.25: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಸುಸಂದರ್ಭದಲ್ಲಿ ಮೊದಲ ವರ್ಷದ ಪ್ರಧಾನ ಸಮಾರಂಭ, ವಿಡಿಯೋ ಸಂವಾದ ಕಾರ್ಯಕ್ರಮವನ್ನು ಜು. 27 ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆಯಲಿದೆ.

ಇದೇ ಕಾರ್ಯಕ್ರಮ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಬಿತ್ತರವಾಗಲಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನರನ್ನು ಉದ್ದೇಶಿಸಿ ಕಳೆದ ಒಂದು ವರ್ಷದಲ್ಲಿ ಆಗಿರುವ ಅಭಿವೃದ್ದಿ ಕಾರ್ಯಗಳು ಮತ್ತು ಮುಂದೆ ಆಗಬೇಕಾದ ಕೆಲಸಗಳು ಸೇರಿದಂತೆ ಅನೇಕ ವಿಷಯಗಳ ಕುರಿತು ಭಾಷಣ ಮಾಡಲಿದ್ದಾರೆ.

ಇದೇ ಸಂದರ್ಭದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.  ಬಾಗಲಕೋಟೆಯ ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್‍ನಲ್ಲಿ ನವತಂತ್ರಜ್ಞಾನದ ವರ್ಚುವಲ್ ಪ್ಲಾಟ್‍ಫಾರಂ ಮೂಲಕ ಕಾರ್ಯಕ್ರಮದ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯಕ್ರಮ ವೀಕ್ಷಿಸಲಿದ್ದಾರೆ. ವಿವಿಧ ಯೋಜನೆಗಳ ಫಲಾನುಭವಿಗಳು, ಮಾಧ್ಯಮ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

ಇದೇ ಸಂದರ್ಭದಲ್ಲಿ ಸರಕಾರದ ಒಂದು ವರ್ಷದ ಸಾಧನೆಗೆ ಸಂಬಂಧಿಸಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ಕಿರುಹೊತ್ತಿಗೆಯನ್ನು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಬಿಡುಗಡೆ ಮಾಡಿ ನಂತರ ಮಾತನಾಡಲಿದ್ದಾರೆ. ಕಾರ್ಯಕ್ರಮದ ನಂತರ ನವರ ನಗರದ ನೂತನ ಪತ್ರಿಕಾ ಭವನದಲ್ಲಿ ವಾರ್ತಾ ಇಲಾಖೆಯ ಪತ್ರಕರ್ತರ ಹೊಸ ವಾಹನಕ್ಕೆ ಚಾಲನೆ ನೀಡಲಿದ್ದಾರೆಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News