ರಾಜ್ಯದಲ್ಲಿ ಉಗ್ರರ ಭೀತಿ ಎಂಬ ವಿಶ್ವಸಂಸ್ಥೆ ವರದಿ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯೆ

Update: 2020-07-26 13:11 GMT

ಬೆಂಗಳೂರು, ಜು. 26: ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ದ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿದ್ದು, ಪರಸ್ಪರ ಮಾಹಿತಿ ಹಂಚಿಕೊಳ್ಳುತ್ತಿದ್ದೇವೆ. ರಾಜ್ಯದಲ್ಲಿ ಉಗ್ರರ ಚಟುವಟಿಕೆಗಳನ್ನು ಮಟ್ಟಹಾಕಲು ಕೆಲಸ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ರವಿವಾರ ಸಿಎಂ ನಿವಾಸ ಕಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಗ್ರರ ಚಟುವಟಿಕೆ ಸಂಬಂಧ ವಿಶ್ವಸಂಸ್ಥೆ ವರದಿ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕೇರಳ ಹಾಗೂ ಕರ್ನಾಟಕದಲ್ಲಿ ಉಗ್ರರ ಕೃತ್ಯದ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆ ಹಿನ್ನೆಲೆಯಲ್ಲಿ ಎನ್‍ಐಎಯೊಂದಿಗೆ ನಮ್ಮ ಪೊಲೀಸರು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಬೆಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಈಗಾಗಲೇ ಕೆಲ ಪ್ರಕರಣಗಳನ್ನು ಭೇದಿಸಲಾಗಿದೆ. ರಾಜ್ಯದಲ್ಲಿ ಉಗ್ರಗಾಮಿ ಚಟುವಟಿಕೆಗಳನ್ನು ನಿಗ್ರಹಿಸಲು ಗೃಹ ಇಲಾಖೆ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಎನ್‍ಐಎ ಜೊತೆಗೆ ನೆರೆಯ ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ ಮತ್ತು ಮಹಾರಾಷ್ಟ್ರ ಪೊಲೀಸರ ಜೊತೆ ಸಂಪರ್ಕದಲ್ಲಿದ್ದು ಮಾಹಿತಿ ಹಂಚಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.

ರಾಜ್ಯದ ಪೊಲೀಸರ ಕಾರ್ಯಾಚರಣೆಯನ್ನು ಆಧರಿಸಿಯೇ ವಿಶ್ವಸಂಸ್ಥೆ ವರದಿ ನೀಡಿದೆ. ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿಯೂ ಉಗ್ರ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ. ಮುಂದೆಯೂ ನೀಡುವ ಪ್ರಶ್ನೆಯೆ ಇಲ್ಲ. ಈ ನಿಟ್ಟಿನಲ್ಲಿ ನಮ್ಮ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಇದೇವೇಳೆ ಸ್ಪಷ್ಟನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News