ಜು.27ರಂದು ಬಿಜೆಪಿ ವಿರುದ್ಧ ರಾಜಭವನದ ಎದುರು ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು, ಜು.26: ದೇಶದಲ್ಲಿ ಚುನಾಯಿತ ಸರಕಾರಗಳನ್ನು ಪತನಗೊಳಿಸಿ, ವಾಮಮಾರ್ಗದಿಂದ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿರುವ ಕೇಂದ್ರ ಸರಕಾರ ಹಾಗೂ ಬಿಜೆಪಿ ಪಕ್ಷದ ವಿರುದ್ಧ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನೀಡಿರುವ ಸೂಚನೆಯ ಹಿನ್ನೆಲೆಯಲ್ಲಿ ಜು.27ರಂದು ಮಧ್ಯಾಹ್ನ 1.30ಕ್ಕೆ ರಾಜಭವನದ ಎದುರು ಕೆಪಿಸಿಸಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ ಎಂಬ ಘೋಷ ವಾಕ್ಯದೊಂದಿಗೆ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಸಂಸದರು, ಶಾಸಕರು, ಮಾಜಿ ಶಾಸಕರು, 2019ರ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳು, 2018ನೆ ಸಾಲಿನ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳು ಮತ್ತು ಬೆಂಗಳೂರು ನಗರದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಪಾಲ್ಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾಯಾಧ್ಯಕ್ಷರಾದ ಸಲೀಮ್ ಅಹ್ಮದ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.