ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ: ಎಐಡಿಎಸ್‍ಒ ದಿಂದ ಜು.27ರಂದು ವಿದ್ಯಾರ್ಥಿ ಚಳವಳಿಗೆ ಕರೆ

Update: 2020-07-26 16:42 GMT

ಬೆಂಗಳೂರು, ಜು.26: ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕಳೆದ 15 ದಿನಗಳಿಂದ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಎಐಡಿಎಸ್‍ಒ ವತಿಯಿಂದ ನಾಳೆ(ಜು.27) ರಾಜ್ಯಾದ್ಯಂತ ವಿದ್ಯಾರ್ಥಿ ಚಳವಳಿಗೆ ಕರೆ ನೀಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆ, ಕಳೆದ ಒಂದು ದಶಕದಿಂದ ರಾಜ್ಯಾದ್ಯಂತ 42 ಸಾವಿರ ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯಡಿ ಕೆಲಸ ಮಾಡುತ್ತಿದ್ದಾರೆ. ಅನಾರೋಗ್ಯ ಪೀಡಿತರು, ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಇವರ ಕಾರ್ಯದಿಂದಾಗಿ ಸಮಾಜದ ಆರೋಗ್ಯ ಸುಧಾರಿಸಿದೆ.

ಜನರ ಆರೋಗ್ಯಕ್ಕಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕನಿಷ್ಟ ಮಾಸಿಕ 12 ಸಾವಿರ ರೂ. ಗೌರವ ಧನ ನೀಡುವಂತೆ ಒತ್ತಾಯಿಸಿ 15 ದಿನದಿಂದ ಹೋರಾಟ ನಡೆಯುತ್ತಿದೆ. ಆದರೆ, ರಾಜ್ಯ ಸರಕಾರ ಮಾತ್ರ ಈ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದೆ. ತಾಯಂದಿರ ಆರೋಗ್ಯ ಸುಧಾರಣೆಯಲ್ಲಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸ್ಪಂದಿಸುವುದು ರಾಜ್ಯದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಐಡಿಎಸ್‍ಒ ವತಿಯಿಂದ ನಾಳೆ ರಾಜ್ಯಾದ್ಯಂತ ವಿದ್ಯಾರ್ಥಿಗಳು ಹೋರಾಟ ನಡೆಸಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News