ರಾಜ್ಯದ ಅಭಿವೃದ್ಧಿಯ ವೇಗಕ್ಕೆ ಕೊರೋನ ಕಂಟಕ: ಮುಖ್ಯಮಂತ್ರಿ ಯಡಿಯೂರಪ್ಪ

Update: 2020-07-27 11:20 GMT

ಬೆಂಗಳೂರು, ಜು. 27: ರಾಜ್ಯದಲ್ಲಿ ಮಾರಕ ಕೊರೋನ ವೈರಸ್ ಸೋಂಕು ಬಾರದಿದ್ದರೆ ಅಭಿವೃದ್ಧಿ ಕಾರ್ಯಗಳು ಅತ್ಯಂತ ವೇಗವಾಗಿ ನಡೆಯುತ್ತಿದ್ದವು. ಆದರೂ, ನಾವು ಧೃತಿಗೆಡದೆ ಅಭಿವೃದ್ಧಿಯ ನಿಟ್ಟಿನಲ್ಲಿ ನಮ್ಮ ಕಾರ್ಯಗಳನ್ನು ಮುಂದುವರಿಸಿದ್ದೇವೆ. ರಾಜ್ಯದ ಜನತೆಗೆ ಸುಭದ್ರ ಸರಕಾರ ಹಾಗೂ ಕರ್ನಾಟಕ ಸರ್ವಾಂಗೀಣ ಅಭಿವೃದ್ಧಿ ನಮ್ಮ ಗುರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಘೋಷಿಸಿದ್ದಾರೆ.

ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ರಾಜ್ಯ ಸರಕಾರ ಒಂದು ವರ್ಷ ಪೂರ್ಣಗೊಳಿಸಿದ ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇನ್ನೂ ಮುಂದೆ `ಲಾಕ್‍ಡೌನ್' ಚರ್ಚೆ ಮಾಡುವುದಿಲ್ಲ. ಕೊರೋನ ಸೋಂಕಿನ ಜತೆ ಬದುಕುವುದು ಕಲಿಯಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗುವ ಮೂಲಕ ಆರ್ಥಿಕ ಕ್ರೋಡೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ಮಾಡಿದರು.

ಎಲ್ಲರಿಗೂ ಅಭಿನಂದನೆ: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದೆ. ಕೊರೋನ ಸಂಕಷ್ಟದ ಸಂದರ್ಭದಲ್ಲೂ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತಿಲ್ಲ. ಇದಕ್ಕೆ ಸಹಕರಿಸಿದ ಸಂಪುಟದ ಎಲ್ಲ ಸಹೋದ್ಯೋಗಿಗಳು, ಶಾಸಕರು, ಸಂಸದರು ಹಾಗೂ ಪ್ರತಿಪಕ್ಷದ ನಾಯಕರಿಗೆ ಸೇರಿದಂತೆ ಎಲ್ಲರಿಗೂ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.

ನಾನು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಆರಂಭದಲ್ಲಿ ರಾಜ್ಯದ ಹಲವು ಕಡೆ ತೀವ್ರ ಸ್ವರೂಪದ ನೆರೆ ಹಾವಳಿ ಉಂಟಾಗಿತ್ತು. ನಾನು ಏಕಾಂಗಿಯಾಗಿ ಅತಿವೃಷ್ಟಿ ಪರಿಸ್ಥಿತಿಯ ಅಗ್ನಿ ಪರೀಕ್ಷೆ ಎದುರಿಸಿ ಸಂಕಷ್ಟಕ್ಕೆ ಸಿಲುಕಿದ ಜನರ ಕಷ್ಟಕ್ಕೆ ಸ್ಪಂದಿಸಿದ್ದೇನೆ ಎಂದ ಯಡಿಯೂರಪ್ಪ, ಕೇಂದ್ರ ಸರಕಾರದ `ಕಿಸಾನ್ ಸಮ್ಮಾನ್ ಯೋಜನೆ'ಯಡಿ ರಾಜ್ಯದ 50 ಲಕ್ಷ ಮಂದಿ ರೈತರಿಗೆ ತಲಾ 4 ಸಾವಿರ ರೂ.ನೀಡಲಾಗುತ್ತಿದೆ ಎಂದು ಹೇಳಿದರು.

ನನ್ನ ಎರಡು ಕಣ್ಣುಗಳು: ರಾಜ್ಯದಲ್ಲಿನ ರೈತರು ಹಾಗೂ ನೇಕಾರರು ನಮ್ಮ ಸರಕಾರದ ಎರಡು ಕಣ್ಣುಗಳಿದ್ದಂತೆ. ಹೀಗಾಗಿಯೇ ಅವರಿಗೆ ನಮ್ಮ ಸರಕಾರ ಆದ್ಯತೆ ನೀಡಿದೆ. ಜತೆಗೆ ಎಸ್ಸಿ-ಎಸ್ಟಿ ಸೇರಿದಂತೆ ಎಲ್ಲ ವರ್ಗದ ಜನರ ಕಷ್ಟಗಳಿಗೆ ಸ್ಪಂದಿಸಿದೆ ಎಂದ ಅವರು, ದಲಿತರ ಮನೆಗಳಿಗೆ ಭೇಟಿ ನೀಡಿ ಅವರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಪ್ರತಿ ಬಡವರಿಗೂ ಸೂರು ಒದಗಿಸುವ ಗುರಿ ನಮ್ಮದಾಗಿದೆ ಎಂದ ಯಡಿಯೂರಪ್ಪ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮೂಲಕ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಉತ್ತಮ ಬೆಲೆ ಮಾರಾಟ ಮಾಡುವ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ಈ ಬಗ್ಗೆ ಯಾರು ಏನೇ ಟೀಕೆ ಮಾಡಿದರೂ ಅದನ್ನು ಪರಿಗಣಿಸದೆ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು.

ಕೇವಲ ಶೇ.2ರಷ್ಟು: ಅಭಿವೃದ್ಧಿ ದೃಷ್ಟಿ ಹಾಗೂ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹೊಸ ಕೈಗಾರಿಕಾ ನೀತಿ ಜಾರಿ ಮಾಡಲಾಗುತ್ತಿದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಲಾಗಿದ್ದು, ಇದಕ್ಕೆ ಕೆಲವರು ಆಕ್ಷೇಪಿಸಿದ್ದಾರೆ. ಆದರೆ, ರಾಜ್ಯದಲ್ಲಿ ಕೇವಲ ಶೇ.2ರಷ್ಟು ಭೂಮಿಯನ್ನಷ್ಟೇ ಕೈಗಾರಿಕೆಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಯಡಿಯೂರಪ್ಪ ಸ್ಪಷ್ಟನೆ ನೀಡಿದರು.

ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ. ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಅವರ ಕನಸಿನ ಸಬ್ ಅರ್ಬನ್ ರೈಲು ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ರಸ್ತೆಗಳ ಅಭಿವೃದ್ಧಿ ಹಾಗೂ 970 ಕಿಮೀ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮಾಡಲಾಗುತ್ತಿದೆ. ಎಲ್ಲಿಂದಲಾದರೂ ಹಣವನ್ನು ತಂದು ರಸ್ತೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದರು.

ನೀರಾವರಿಗೆ ಆದ್ಯತೆ: ನೀರಾವರಿ ಯೋಜನೆಗೆ ಆದ್ಯತೆ ನೀಡಲಾಗಿದೆ. ಮಹಾದಾಯಿ ಜಲ ವಿವಾದ ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ. ಮೇಕೆದಾಟು ಯೋಜನೆ ಜಾರಿಗೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ ಎಂದ ಅವರು, ಡಾ.ನಂಜುಂಡಪ್ಪ ವರದಿ ಜಾರಿಗೆ ಒತ್ತು ನೀಡುವ ಮೂಲಕ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಕ್ರಮ ವಹಿಸಿದ್ದು, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಸರಕಾರದ ಗುರಿ ಎಂದು ಪ್ರಕಟಿಸಿದರು.

ಮಾದರಿ ನಗರ: ಬೆಂಗಳೂರು ನಗರಕ್ಕೆ ಅಂತರ ರಾಷ್ಟ್ರೀಯ ಮಾನ್ಯತೆ ಕಲ್ಪಿಸುವ ನಿಟ್ಟಿನಲ್ಲಿ ನಗರದ ಸವಾರ್ಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಮುಂದಿನ ಮೂರು ವರ್ಷದಲ್ಲಿ ಬೆಂಗಳೂರು ಮಾದರಿ ನಗರವಾಗಿ ಹೊರ ಹೊಮ್ಮಲಿದೆ. ಇಲ್ಲಿನ ರಸ್ತೆಗಳು ಸೇರಿದಂತೆ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ವಿಶೇಷ ಆಸ್ಥೆ ವಹಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಪ್ರಧಾನಿ ಮೆಚ್ಚುಗೆ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 25 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದೇವೆ. ಹದಿನೈದು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 12 ಸ್ಥಾನಗಳಲ್ಲಿ ನಾವು ಗೆಲುವು ಸಾಧಿಸಿದ್ದು, ಇದರ ಹಿಂದೆ ಪಕ್ಷದ ಕಾರ್ಯಕರ್ತರ ಅಪಾರ ಶ್ರಮವಿದೆ. ನಮ್ಮ ಸಾಧನೆಗೆ ಪ್ರಧಾನಿ ಮೋದಿಯವರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.

ರಾಜ್ಯದ ಜನರ ಅಪಾರ ಋಣ ನಮ್ಮ ಮೇಲಿದೆ. ರಾಜ್ಯದಲ್ಲಿ ಕೊರೋನ ಸೋಂಕಿನಿಂದ ಅಭಿವೃದ್ಧಿ ನಿರೀಕ್ಷಿತ ಪ್ರಮಾಣದಲ್ಲಿ ಆಗುತ್ತಿಲ್ಲ. ಆದರೂ, ನಾವು ವಿಚಲಿತರಾಗದೆ ಮುನ್ನಡೆಯುವ ಮೂಲಕ ರಾಜ್ಯದ ಸರ್ವಾಗೀಣ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯವನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿ ಮಾಡಲಾಗುವುದು ಎಂದು ಯಡಿಯೂರಪ್ಪ ಇದೇ ವೇಳೆ ಹೇಳಿದರು.

ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಸೇರಿದಂತೆ ಇನ್ನಿತರರು ಹಾಜರಿದ್ದರು. ಇದೇ ವೇಳೆ `ಸವಾಲುಗಳ ವರ್ಷ-ಪರಿಹಾರದ ಸ್ಪರ್ಶ' ಮಾಹಿತಿ ಪುಸ್ತಕವನ್ನು ಲೋಕಾರ್ಪಣೆ ಮಾಡಲಾಯಿತು.

ನಾನು ಎಂದೂ ದ್ವೇಷದ ರಾಜಕಾರಣ ಮಾಡಿಲ್ಲ. ಸರಕಾರದ ವಿರುದ್ದ ಯಾರು ಏನೇ ಟೀಕೆ-ಟಿಪ್ಪಣಿ ಮಾಡಿದರೂ ಅವರನ್ನು ಸ್ನೇಹದಿಂದಲೇ ನೋಡಿದ್ದೇನೆ. ರಾಜ್ಯದಲ್ಲಿ ಈ ಒಂದು ವರ್ಷದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಆದ್ಯತೆ ನೀಡಿದ್ದು, ಯಾವುದೇ ರೀತಿಯ ಕೋಮು-ಗಲಭೆಗಳಿಗೆ ಅವಕಾಶ ನೀಡದೆ ಅತ್ಯಂತ ಸುಗಮವಾಗಿ ಆಡಳಿತ ನಡೆಸಲಾಗಿದೆ'

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News