ಜಾನುವಾರು ಸಾಗಾಟಗಾರರಿಗೆ ಹಲ್ಲೆ ನಡೆಸಿದರೆ ಕಾನೂನು ಕ್ರಮ: ದ.ಕ. ಜಿಲ್ಲಾಧಿಕಾರಿ ಎಚ್ಚರಿಕೆ

Update: 2020-07-27 13:09 GMT

ಮಂಗಳೂರು, ಜು.27: ಜಾನುವಾರು ಸಾಗಾಟ ವಾಹನ/ಜನರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಖಡಕ್ ಸೂಚನೆ ರವಾನಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು/ ಮುಖ್ಯ ಪಶುವೈದ್ಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಾನುವಾರು ಸಾಗಾಟ ಮಾಡುವ ಸಂದರ್ಭ ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದರು.

ಜಾನುವಾರು ಸಾಗಾಟ ಸಂದರ್ಭ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪಶುಪಾಲನಾ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ತಿಳಿಯಪಡಿಸಲು ಕರಪತ್ರಗಳಲ್ಲಿ ಮಾಹಿತಿಯನ್ನು ಮುದ್ರಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರಚಾರ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ನಿರ್ದೇಶನ ನೀಡಿದ್ದಾರೆ.

ಬಕ್ರೀದ್ ಹಾಗೂ ಇತರ ಹಬ್ಬಗಳ ಸಂದರ್ಭ ಜಾನುವಾರುಗಳ ಅಕ್ರಮ ಸಾಗಾಟ ಮತ್ತು ವಧೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಸರಕಾರದ ನಿಯಮಗಳನ್ನು ಉಲ್ಲಂಘಿಸುವಂತಿಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News