ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ: 4 ನಿಗಮ ಮಂಡಳಿ ಅಧ್ಯಕ್ಷರ ನೇಮಕ ಹಿಂಪಡೆದ ಬಿಎಸ್‍ವೈ

Update: 2020-07-27 14:19 GMT

ಬೆಂಗಳೂರು, ಜು. 27: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರಕಾರಕ್ಕೆ ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ 'ಕೊಡುಗೆ'ಯಾಗಿ ನೇಮಕ ಮಾಡಿದ ಬೆನ್ನಲ್ಲೆ ಅಸಮಾಧಾನ ಭುಗಿಲೆದ್ದ ಕಾರಣ, ನಾಲ್ಕು ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಯನ್ನು ಹಿಂಪಡೆಯಲು ಸೂಚಿಸಲಾಗಿದೆ.

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಚಿತ್ರದುರ್ಗ ನಗರ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕರೂ ಆಗಿರುವ ಜಿ.ಎಚ್.ತಿಪ್ಪಾರೆಡ್ಡಿ ಅವರನ್ನು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಈ ಸುದ್ಧಿ ಬಿತ್ತರಗೊಂಡ ಬೆನ್ನಲ್ಲೆ ಅಸಮಾಧಾನ ಹೊರಹಾಕಿದ ಶಾಸಕ ತಿಪ್ಪಾರೆಡ್ಡಿ, `ನನಗೆ ಯಾವುದೇ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಮತ್ತು ಗೂಟದ ಕಾರಿನ ಅಗತ್ಯವೂ ಇಲ್ಲ, ನಾನು ಶಾಸಕನಾಗಿಯೇ ಮುಂದುವರಿಯುತ್ತೇನೆ. ನನ್ನನ್ನು ಅವಮಾನಿಸಲಿಕ್ಕಾಗಿಯೇ ನಿಗಮ ಮಂಡಳಿ ಅಧ್ಯಕ್ಷನನ್ನಾಗಿ ನೇಮಕ ಮಾಡಲಾಗಿದೆ' ಎಂದು ಅಧ್ಯಕ್ಷ ಸ್ಥಾನವನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಜತೆಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಪರಣ್ಣ ಈಶ್ವರಪ್ಪ ಮನವಳ್ಳಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಉಡುಪಿ ಜಿಲ್ಲೆ ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್.ಮೆಂಡನ್ ಮತ್ತು ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷರಾಗಿ ನಿಯೋಜನೆ ಮಾಡಲಾಗಿರುವ ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಬಸವರಾಜ ದಢೇಸೂರ್ ಅವರ ನೇಮಕವನ್ನು ವಾಪಸ್ ಪಡೆಯಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.

ಮೇಲ್ಕಂಡ ನಾಲ್ಕೂ ಮಂದಿಯೂ ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತರಾಗಿದ್ದು, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದರು. ಅವರನ್ನು 'ಸಮಾಧಾನಪಡಿಸಲು' ಸಿಎಂ ಬಿಎಸ್‍ವೈ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು. ಆದರೆ, ಇದೀಗ ಅವರೆಲ್ಲ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ಳದ ಹಿನ್ನೆಲೆಯಲ್ಲಿ ಅವರ ನೇಮಕವನ್ನು ಯಡಿಯೂರಪ್ಪ ಹಿಂಪಡೆದಿದ್ದಾರೆಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News