ಕೋವಿಡ್19: ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ; ವೀಡಿಯೊ ಸಂವಾದದಲ್ಲಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಎಚ್ಚರಿಕೆ

Update: 2020-07-28 14:53 GMT

ಮಂಗಳೂರು, ಜು.28: ಕೋವಿಡ್-19ರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿಂದ ದ.ಕ. ಜಿಲ್ಲಾಡಳಿತ, ಜನಪ್ರತಿನಿಧಿಗಳೊಂದಿಗೆ ಮಂಗಳವಾರ ವೀಡಿಯೊ ಸಂವಾದ ನಡೆಸಿದ ಡಿಸಿಎಂ, ಕೊರೋನ ಸೋಂಕಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಹಾಗೂ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಇದರಿಂದ ಸಾರ್ವಜನಿಕರಲ್ಲಿ ಭೀತಿ ಮೂಡಿದೆ. ಕೋವಿಡ್ ಸೋಂಕಿತರಿಗೆ ಅವಮಾನ ಮಾಡುವುದು, ಕೊರೋನ ವಾರಿಯರ್ಸ್ ವಿರುದ್ಧ ಗೊಂದಲ ಸೃಷ್ಟಿಸುವ ಪ್ರಕರಣಗಳು ಹೆಚ್ಚುತ್ತಿವೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಕ್ಸಿಜನ್ ಸಿಲಿಂಡರ್, ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್, ಆ್ಯಂಬುಲೆನ್ಸ್, ವೆಂಟಿಲೇಟರ್ ಸಹಿತ ಎಲ್ಲ ಸೌಲಭ್ಯಗಳನ್ನು ರಾಜ್ಯ ಸರಕಾರವು ಜಿಲ್ಲಾಡಳಿತಕ್ಕೆ ನೀಡುತ್ತಿದೆ. ಕೋವಿಡ್ ಸೋಂಕಿತರಿಗೆ ಆತಂಕವಾಗದಂತೆ ಸಮಸ್ಯೆಗಳನ್ನು ಪರಿಹರಿಸಿ ಬಡವರಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಹೇಳಿದರು.

ಸಂವಾದದಲ್ಲಿ ಜಿಲ್ಲೆಯ ಮಾಹಿತಿ ನೀಡಿದ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಜಿಲ್ಲೆಯಲ್ಲಿ 204 ಆಕ್ಸಿಜನ್ ಸಿಲಿಂಡರ್‌ಗಳು, 13,500 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್, 57 ಆ್ಯಂಬುಲೆನ್ಸ್, 143 ವೆಂಟಿಲೇಟರ್‌ಗಳು ಲಭ್ಯ ಇವೆ. ಹೊಸದಾಗಿ ಬಂದಿರುವ ವೆಂಟಿಲೇಟರ್‌ಗಳ ಜೋಡಣೆಯು ಇನ್ನೆರಡು ದಿನಗಳಲ್ಲಿ ಪೂರ್ಣಗಳೊಳ್ಳಲಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಕೊರತೆ ಇಲ್ಲ. ವೆನ್ಲಾಕ್ ಕೋವಿಡ್ ಆಸ್ಪತ್ರೆ, ಕೆಎಂಸಿ ಅತ್ತಾವರ, ಕೆ.ಎಸ್. ಹೆಗಡೆ, ಯೆನೆಪೊಯ ಆಸ್ಪತ್ರೆಗಳಲ್ಲಿ ಲ್ಯಾಬ್ ವ್ಯವಸ್ಥೆ ಇದೆ. ಪ್ರತಿದಿನ ಸರಾಸರಿ 500 ಪರೀಕ್ಷೆಗಳು ನಡೆಯುತ್ತಿವೆ ಎಂದು ತಿಳಿಸಿದರು.

ಈ ಸಂದರ್ಭ ಪ್ರತಿಕ್ರಿಯಿಸಿದ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ, ಕೋವಿಡ್ ಮಾದರಿ ಪರೀಕ್ಷೆ ನಡೆಸುವ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ. ಪ್ರತಿದಿನ 1,000 ಮಾದರಿಯ ಪರೀಕ್ಷೆಗಳು ನಡೆಯಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತೆಯರು ಉತ್ತಮವಾಗಿ ಸ್ಪಂದಿಸಿರುವುದಕ್ಕೆ ಡಿಸಿಎಂ ಸಹಿತ ಸಚಿವರು ಮೆಚ್ಚುಗೆ ಸೂಚಿಸಿದರು. ವೀಡಿಯೊ ಸಂವಾದಲ್ಲಿ ದ.ಕ.ಜಿಲ್ಲಾಡಳಿತಕ್ಕೆ ಕೋವಿಡ್-19ರ ನಿಯಂತ್ರಿಸಲು ಸಚಿವರು ಮಾರ್ಗದರ್ಶನ ನೀಡಿದರು.

ಸಂವಾದ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News