ನಿಗಮ ನೇಮಕದ ಬೆನ್ನಲ್ಲೇ ಬಿಜೆಪಿಯಲ್ಲಿ ಹೊಸ ಬೆಳವಣಿಗೆಗಳು: ಬಿಎಸ್‌ವೈಗೆ ತಲೆಬಿಸಿ

Update: 2020-07-28 17:16 GMT

ಬೆಂಗಳೂರು, ಜು. 28: ರಾಜ್ಯ ಬಿಜೆಪಿ ಸರಕಾರ ಒಂದು ವರ್ಷದ ಸಂಭ್ರಮದಲ್ಲಿರುವ ಸಂದರ್ಭದಲ್ಲೇ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳನ್ನು ಸಮಾಧಾನಪಡಿಸಲು ಹಿರಿಯ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೂ, ಬಹುತೇಕರು ಆ ಸ್ಥಾನವನ್ನು ಒಪ್ಪಿಕೊಳ್ಳದಿರುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹೊಸ ತಲೆನೋವು ತಂದಿಟ್ಟಿದೆ.

ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಂಡರೆ ಎಲ್ಲಿ ಸಚಿವ ಸ್ಥಾನ ಸಿಗುವುದಿಲ್ಲವೋ ಎಂಬ 'ಆತಂಕ'ದಿಂದ ಹಿರಿಯ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಸಿದ್ಧು ಸವದಿ, ರಾಜುಗೌಡ, ಎಂ.ಪಿ.ಕುಮಾರಸ್ವಾಮಿ, ಶಿವನಗೌಡ ನಾಯಕ್, ನೆಹರೂ ಓಲೇಕಾರ್ ಸೇರಿದಂತೆ ಹತ್ತಕ್ಕೂ ಹೆಚ್ಚು ಶಾಸಕರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿದ್ದಾರೆ ಎನ್ನಲಾಗುತ್ತಿದ್ದು, ನಾವು ಶಾಸಕರಾಗಿಯೇ ಇರುತ್ತೇವೆ ಎಂದು ಪರೋಕ್ಷವಾಗಿ ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ.

ಈ ಬೆಳವಣಿಗೆಗಳ ಮಧ್ಯೆ ಆಗಸ್ಟ್ 15ಕ್ಕೆ ಮೊದಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಸಂಪುಟದಲ್ಲಿ ಖಾಲಿ ಇರುವ ಆರು ಸ್ಥಾನಗಳನ್ನು ಭರ್ತಿ ಮಾಡುವ ಸಾಧ್ಯತೆಗಳಿವೆ. ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಸಿ.ಪಿ.ಯೋಗೇಶ್ವರ್, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಇನ್ನಿತರರು ಸಂಪುಟ ಸೇರ್ಪಡೆಗೆ ತೀವ್ರ ಲಾಬಿ ನಡೆಸಿದ್ದಾರೆ.

ಮತ್ತೊಂದು ಮೂಲದ ಮಾಹಿತಿಯನ್ವಯ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸಿ ಆ ಸ್ಥಾನಕ್ಕೆ ಹೊಸಬರನ್ನು ತರಲು ತೆರೆ ಮರೆಯಲ್ಲೇ ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದು, ಯಡಿಯೂರಪ್ಪನವರ ಸಂಪುಟದಲ್ಲೇ ಉಪಮುಖ್ಯಮಂತ್ರಿಯೂ ಆಗಿರುವ ಲಕ್ಷ್ಮಣ ಸವದಿ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಜೊತೆಗೆ, ಸಿಎಂ ಲಕ್ಷ್ಮಣ ಸವದಿ ಮುಂದಿನ ಮುಖ್ಯಮಂತ್ರಿ ಎಂದು ಬೆಳಗಾವಿ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರದಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ಈ ಎಲ್ಲ ಬೆಳವಣಿಗೆಗಳ ಮಧ್ಯೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, 'ಲಕ್ಷ್ಮಣ ಸವದಿ ಅವರಿಗೆ ಅದೃಷ್ಟವಿದ್ದರೆ(ನಸೀಬು) ಮುಖ್ಯಮಂತ್ರಿಯಾಗಲಿ' ಎಂದು ಹೇಳಿರುವುದು ಮುಖ್ಯಮಂತ್ರಿ ಯಡಿಯೂರಪ್ಪನವರ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳಿಗೆ ಪುಷ್ಟಿ ನೀಡುತ್ತಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲವನ್ನು ಸೃಷ್ಟಿಸಿದೆ.

"ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸಂಬಂಧ ಯಡಿಯೂರಪ್ಪನವರು ವರಿಷ್ಟರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಂಡಿದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ. ಹೀಗಾಗಿ ಕೆಲ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಸಹಜ. ನಾಯಕತ್ವ ಬದಲಾವಣೆ ಬಗ್ಗೆ ವರಿಷ್ಠರು ತೀರ್ಮಾನ ಮಾಡಲಿದ್ದಾರೆ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪನವರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದಾರೆ" ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

ಈ ಮಧ್ಯೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಆದರೆ, ರಾಜ್ಯದಲ್ಲಿ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸಂಬಂಧ ಅಧಿಕೃತ ಆದೇಶ ಹೊರ ಬೀಳುವ ಮೊದಲೇ ಶಾಸಕರು ಅಸಮಾಧಾನ ಹೊರ ಹಾಕಿರುವುದು ಮತ್ತು ರಾಜ್ಯದಲ್ಲಿನ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರು ಮೌನಕ್ಕೆ ಶರಣಾಗಿರುವುದನ್ನು ಗಮನಿಸಿದರೆ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಪುಷ್ಟಿ ನೀಡುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News