ಮಂಗಳೂರು: ಕಿರಿಯ ಗುತ್ತಿಗೆ ಆರೋಗ್ಯ ಸಹಾಯಕಿಯರ ಪ್ರತಿಭಟನೆ

Update: 2020-07-29 11:35 GMT

ಮಂಗಳೂರು, ಜು.29: ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಕಿರಿಯ ಆರೋಗ್ಯ ಸಹಾಯಕಿಯರನ್ನು ಖಾಯಂ ಮಾಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಹಾಗು ಸೇವಾ ಭದ್ರತೆ ನೀಡಬೇಕು ಎಂದು ಆಗ್ರಹಿಸಿ ಮಂಗಳೂರು ತಾಲೂಕಿನ ಕಿರಿಯ ಆರೋಗ್ಯ ಸಹಾಯಕಿಯರು ಬುಧವಾರ ಮಿನಿ ವಿಧಾನ ಸೌಧ ಎದುರು ಪ್ರತಿಭಟನೆ ನಡೆಸಿದರು.

ಕೋವಿಡ್19 ಬಂದ ಬಳಿಕ ಕಳೆದ 5 ತಿಂಗಳಿನಿಂದ ರಜೆಯನ್ನು ಪಡೆಯದೆ ಕಂಟೈನ್‌ಮೆಂಟ್ ಝೋನ್‌ಗಳಲ್ಲಿ ಹಾಗು ವಹಿಸಿದ ಇತರ ಪ್ರದೇಶಗಳಿಗೆ ತೆರಳಿ ಕರ್ತವ್ಯ ನಿರ್ವಹಿಸಿದ್ದೇವೆ. ಎಲ್ಲ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದರೂ ಸಮಾನ ಕೆಲಸಕ್ಕೆ ಸಮಾನ ವೇತನ ಇರುವುದಿಲ್ಲ. ಸೇವಾ ಸೌಲಭ್ಯ ಮತ್ತು ಭದ್ರತೆ ಇರುವುದಿಲ್ಲ. ಕಡಿಮೆ ವೇತನ ಸಿಗುವುದರಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಪ್ರತಿಭಟನಾ ನಿರತ ಕಿರಿಯ ಆರೋಗ್ಯ ಸಹಾಯಕಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಬರುವ ಪೌಷ್ಟಿಕ ಆರೋಗ್ಯ ಯೋಜನೆಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಬರುತ್ತಿದ್ದೇವೆ. ಆದರೆ ಕನಿಷ್ಠ ವೇತನದಲ್ಲಿ ನಮಗೆ ಹಾಗು ಕುಟುಂಬಕ್ಕೆ ಪೌಷ್ಠಿಕ ಆಹಾರವನ್ನು ಪೂರೈಸಿಕೊಳ್ಳಲು ಆಗುತ್ತಿಲ್ಲ. ಆದ್ದರಿಂದ ನಮ್ಮ ಬೇಡಿಕೆಗೆ ಸ್ಪಂದಿಸಿ, ತಕ್ಷಣ ಈಡೇರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News