×
Ad

ಬಿಎಸ್‍ವೈ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಲಕ್ಷ್ಮಣ ಸವದಿ

Update: 2020-07-29 19:01 IST

ಬೆಂಗಳೂರು, ಜು. 29: `ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಮುಂದಿನ ಮೂರು ವರ್ಷಗಳ ಕಾಲ ಬಿ.ಎಸ್.ಯಡಿಯೂರಪ್ಪನವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ' ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬುಧವಾರ ಹೊಸದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಮೂರು ದಿನಗಳಿಂದ ಇದ್ದು ಪೂರ್ವ ನಿಗದಿ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಹೊಸದಿಲ್ಲಿಯಲ್ಲೇ ಇದ್ದೇನೆ. ನಾನು ಮುಖ್ಯಮಂತ್ರಿ ಹುದ್ದೆಗೆ ಪ್ರಯತ್ನಿಸುತ್ತಿದ್ದೇನೆ ಎಂಬ ಮಧ್ಯಮಗಳ ವರದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸ್ಪಷ್ಟನೆ ನೀಡಿದರು.

ನಾನೇ ಮುಂದಿನ ಮುಖ್ಯಮಂತ್ರಿ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಇದರಲ್ಲಿ ಯಾವುದೇ ಹುರುಳಿಲ್ಲ. ಸಾರಿಗೆ ಇಲಾಖೆ ಕೆಲಸ-ಕಾರ್ಯಗಳ ನಿಮಿತ್ತ ನಾನು ದಿಲ್ಲಿಗೆ ಬಂದಿದ್ದೇನೆ. ಬಿಎಸ್‍ವೈ ಅವರು ನಮ್ಮ ನಾಯಕರು. ಮುಂದಿನ ಮೂರು ವರ್ಷಗಳ ಕಾಲ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ. ಈ ಬಗ್ಗೆ ಯಾವುದೇ ಕಾರಣಕ್ಕೂ ಯಾರೊಬ್ಬರಿಗೂ ಸಂಶಯಬೇಡ ಎಂದು ಲಕ್ಷ್ಮಣ ಸವದಿ ನುಡಿದರು.

ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಬಿಎಸ್‍ವೈ ಅವರ ನೇತೃತ್ವದ ಸರಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸರಕಾರ ಮಾಡಿದ ಸಾಧನೆಗಳನ್ನು ಅವರ ಗಮನಕ್ಕೆ ತಂದಿದ್ದು, ಅವರು ಶುಭ ಕೋರಿದ್ದಾರೆ ಎಂದ ಲಕ್ಷ್ಮಣ ಸವದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಪ್ರಯತ್ನಿಸಿದೆ. ಆದರೆ, ಅದು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News