×
Ad

ಕಲ್ಲು ಗಣಿಗಾರಿಕೆ ನಿಷೇಧಕ್ಕೆ ಆಗ್ರಹಿಸಿ ಮಂಡ್ಯ ಬಂದ್: ಪ್ರತಿಭಟನಾಕಾರರ ಬಂಧನ

Update: 2020-07-29 22:36 IST

ಮಂಡ್ಯ, ಜು.29: ಜಿಲ್ಲೆಯ ರೈತರ ಜೀವನಾಡಿ ಕೆಆರ್‍ಎಸ್ ಅಣೆಕಟ್ಟೆ ವ್ಯಾಪ್ತಿಯ ಕಲ್ಲು ಗಣಿಗಾರಿಕೆ ಶಾಶ್ವತ ನಿಷೇಧಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ಜನಾಂದೋಲನ ಸಮಿತಿ ಬುಧವಾರ ಕರೆ ನೀಡಿದ್ದ ಮಂಡ್ಯ ಬಂದ್ ವೇಳೆ ಪ್ರತಿಭಟನೆ ನಡೆಸಿದವರನ್ನು ಪೊಲೀಸರು ಬಂಧಿಸಿದರು.

ಬಂದ್ ಹಿನ್ನೆಲೆಯಲ್ಲಿ ಹಲವು ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನಗರದ ವಿವಿಧೆಡೆ ಬೈಕ್ ಮೂಲಕ ಸಂಚರಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಮನವಿ ಮಾಡಿದರು.

ನಂತರ, ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಸಮಾವೇಶಗೊಂಡು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿ ಕಡೆಗೆ ಮೆರವಣಿಗೆ ಹೊರಟ ಹೋರಾಟಗಾರರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.

ಸಂಘಟನೆಗಳು ಕರೆ ನೀಡಿದ್ದ ಮಂಡ್ಯ ನಗರ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆಳಗ್ಗೆಯಿಂದಲೇ ಕೆಲವು ಅಂಗಡಿ ಮುಂಗಟ್ಟುಗಳು ಮುಚ್ಚಿ ಬಂದ್ ಬೆಂಬಲ ನೀಡಿದರೆ ಬಹುತೇಕ ಅಂಗಡಿಗಳು ತೆರೆದಿದ್ದವು. ವಾಹನಗಳ ಸಂಚಾರ ಮಾಮೂಲಿಯಾಗಿತ್ತು.

ಅಧಿಕಾರಿಗಳ ಶಾಮೀಲು: ಪಟ್ಟಭದ್ರ ಕಲ್ಲುಗಣಿ ಮಾಲಕರ ಜತೆ ಅಧಿಕಾರಿಗಳು ಮತ್ತು ಪೊಲೀಸರು ಶಾಮೀಲಾಗಿ ಬಂದ್ ವಿಫಲಗೊಳಿಸುವ ಯತ್ನ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಲ್ಲದೆ, ತಮ್ಮ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಕಲ್ಲುಗಣಿಗಾರಿಕೆಯಲ್ಲಿ ಭಾರಿ ಸ್ಫೋಟಕ ಬಳಸುವುದರಿಂದ ಕೆಆರ್‍ಎಸ್ ಜಲಾಶಯಕ್ಕೆ ಅಪಾಯವಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸರಕಾರಕ್ಕೆ ವರದಿ ನೀಡಿದೆ. ಆದರೂ ಗಣಿಗಾರಿಕೆ ತಡೆಯುವಲ್ಲಿ ಸರಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

ನೆಪಮಾತ್ರಕ್ಕೆ ಕೆಲವು ಕ್ರಷರ್ ಗಳ ಮೇಲೆ ದಾಳಿ ನಡೆಸಲಾಗುತ್ತದೆ. ಆದರೆ, ಮಾಮೂಲಿಯಂತೆ ಅಕ್ರಮ ಕಲ್ಲುಗಣಿಗಾರಿಕೆ ಮುಂದುವರಿದಿದೆ. ಇದು ಅಧಿಕಾರಿಗಳು ಶಾಮೀಲಾಗಿರುವುದಕ್ಕೆ ಸಾಕ್ಷಿ ಎಂದು ಅವರು ದೂರಿದರು. ಇಂದು ಪೊಲೀಸರು ಹೋರಾಟಗಾರರನ್ನು ಬಂಧಿಸಿ ಬಂದ್ ವಿಫಲಗೊಳಿಸಲು ಯತ್ನಿಸಿದ್ದಾರೆ. ಆದರೆ, ತಮ್ಮ ಹೋರಾಟ ನಿಲ್ಲದು. ಸರಕಾರ ಗಣಿಗಾರಿಕೆ ನೀಷೇಧಿಸದಿದ್ದರೆ ಉಗ್ರ ಹೋರಾಟ ಮುಂದುವರಿಲಿದೆ ಎಂದು ಅವರು ಎಚ್ಚರಿಸಿದರು.

ರೈತಸಂಘ, ದಸಂಸ, ಕರವೇ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ಹಾಗೂ ರಾಜೀವ್ ಗಾಂಧಿ ಆಟೋ ಚಾಲಕರ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News